ಮಡಿಕೇರಿ, ಜು. 13: ದ್ವಿತೀಯ ಪಿಯುಸಿ ಫಲಿತಾಂಶ ತಾ.14ರಂದು (ಇಂದು) ಬೆಳಿಗ್ಗೆ 11.30 ಗಂಟೆಗೆ ಪ್ರಕಟಗೊಳ್ಳಲಿದ್ದು, ವಿದ್ಯಾರ್ಥಿಗಳ ಮೊಬೈಲ್ ನಂಬರ್‍ಗೂ ಫಲಿತಾಂಶ ವನ್ನು ರವಾನಿಸಲಾಗುವುದೆಂದು ಶಿಕ್ಷಣ ಸಚಿವ ಸುರೇಶ್‍ಕುಮಾರ್ ತಿಳಿಸಿದ್ದಾರೆ.ಪೂರಕ ಪರೀಕ್ಷೆ ರದ್ದು ಅತ್ಯಂತ ಸವಾಲನ್ನು ಎದುರಿಸಿ ಪಿಯುಸಿ ಇಂಗ್ಲೀಷ್ ಹಾಗೂ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ನಡೆಸಿದ್ದ ಸರ್ಕಾರ, ಇದೀಗ ಪಿಯುಸಿ ಪೂರಕ ಪರೀಕ್ಷೆ ರದ್ದುಗೊಳಿಸಿ ಆದೇಶ ಮಾಡಿದೆ. ರಾಜ್ಯಾದ್ಯಂತ ಕೋವಿಡ್ ಸೋಂಕಿತರ ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ.

ತಾ. 16 ರಿಂದ 27ರವರೆಗೆ ನಿಗದಿಯಾಗಿದ್ದ ಪ್ರಥಮ ಪಿಯುಸಿ ಪೂರಕ ಪರೀಕ್ಷೆಗಳನ್ನು ರದ್ದುಪಡಿಸ ಲಾಗಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್‍ಕುಮಾರ್ ಹೇಳಿದ್ದಾರೆ.

ಸುಮಾರು 60 ಸಾವಿರ ವಿದ್ಯಾರ್ಥಿಗಳು ಸಪ್ಲಿಮೆಂಟರಿ ಪರೀಕ್ಷೆ ಗಳನ್ನು ತೆಗೆದುಕೊಳ್ಳ ಬೇಕಾಗಿತ್ತು. ಆಯಾ ಕಾಲೇಜುಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕೊಟ್ಟು ಜುಲೈ 30 ರಂದು ಫಲಿತಾಂಶವನ್ನು ಪ್ರಕಟಿಸಲು ನಿರ್ಧರಿಸಲಾಗಿತ್ತು ಎಂದು ಸಚಿವ ಎಸ್. ಸುರೇಶ್‍ಕುಮಾರ್ ಹೇಳಿದ್ದಾರೆ.ದ್ವಿತೀಯ ಪಿಯುಸಿಗೆ ತೇರ್ಗಡೆ ವಾರ್ಷಿಕ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳ ಪರೀಕ್ಷೆಯನ್ನು ಬರೆದು ಅನುತ್ತೀರ್ಣಗೊಂಡ ವಿದ್ಯಾರ್ಥಿ ಗಳನ್ನು ದ್ವಿತೀಯ ಪಿಯುಸಿಗೆ ತೇರ್ಗಡೆ ಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ ಕುಮಾರ್ ತಿಳಿಸಿದ್ದಾರೆ. ಹಾಜರಾತಿ ಕೊರತೆಯಿಲ್ಲದ, ಅನಿವಾರ್ಯ ಸಂದರ್ಭದಲ್ಲಿ ಪರೀಕ್ಷೆಗೆ ಗೈರುಹಾಜರಾದ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗಳು ಪ್ರಾರಂಭವಾದ ಬಳಿಕ ದ್ವಿತೀಯ ಪಿಯುಸಿಯ ಪ್ರಥಮ ಕಿರು ಪರೀಕ್ಷೆ ನಡೆಯುವ ಮೊದಲು, ಪ್ರಥಮ ಪಿಯುಸಿಯಲ್ಲಿ ಅನುತ್ತೀರ್ಣವಾಗಿರುವ ವಿಷಯಗಳಿಗೆ ಮತ್ತೊಮ್ಮೆ ಕಾಲೇಜುಗಳಲ್ಲಿಯೆ ಕಿರುಪರೀಕ್ಷೆಯನ್ನು ನಡೆಸಲಾಗುವುದು. ಆ ಮೂಲಕ ಅವರ ಕಲಿಕಾ ಮಟ್ಟವನ್ನು ಮೌಲ್ಯಮಾಪನ ಮಾಡಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.