ಆಲೂರು-ಸಿದ್ದಾಪುರ/ ಮುಳ್ಳೂರು, ಜು. 15: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರ ಕೃಷಿ ಅಭಿವೃದ್ಧಿ ಪ್ರಗತಿಗೆ ಪೂರಕವಾಗುವ ಉದ್ದೇಶದಿಂದ ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ತಂದಿರುವ ಕ್ರಮವನ್ನು ವಿರೋಧಿಸಿ ದಲಿತ ಸಂಘರ್ಷ ಸಮಿತಿ, ದಲಿತ ಒಕ್ಕೂಟ ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು ಸೋಮವಾರ ಪೇಟೆ ತಾಲೂಕು ಕಚೇರಿ ಎದುರು ಪ್ರತಿಭಟನೆ ಮಾಡಿರುವುದು ಸಮಂಜಸವಲ್ಲ ಎಂದು ತಾಲೂಕು ಬಿಜೆಪಿ ವಕ್ತಾರ ಎಸ್.ಎನ್. ರಘು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ಭೂ ಸುಧಾರಣೆಯಲ್ಲಿ ತಿದ್ದುಪಡಿ ತರುವ ಕ್ರಮದಿಂದ ಯಾರಿಗೂ ಅನ್ಯಾಯವಾಗುವುದಿಲ್ಲ.
ಕಾಯಿದೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಕಾನೂನಿನಲ್ಲಿ ಬದಲಾವಣೆ ತರುವ ಉದ್ದೇಶದಿಂದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಚಿವ ಸಂಪುಟದಲ್ಲಿ ಕೃಷಿ ಕ್ಷೇತ್ರದ ಪ್ರಗತಿಗಾಗಿ ಕಾಯಿದೆಯಲ್ಲಿ ತಿದ್ದುಪಡಿ ತರಲು ಕ್ರಮ ಕೈಗೊಂಡಿದ್ದಾರೆ ಎಂದರು.
ಮುಂಬಯಿನಲ್ಲಿರುವ ಭಾರತ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಾಸದ ಮನೆ ರಾಜಗೃಹವನ್ನು ದುಷ್ಕರ್ಮಿಗಳು ಧ್ವಂಸ ಮಾಡಿರುವ ಪ್ರಕರಣವನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ.
ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಬಿಜೆಪಿಗೆ ಅಪಾರ ಗೌರವ ಇದೆ ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಪ್ರಕರಣದ ಆರೋಪಿಗಳನ್ನು ಬಂಧಿಸಿ ಶಿಕ್ಷೆ ವಿಧಿಸುವಂತೆ ಮನವಿ ಮಾಡಿದರು.
ಗೋಷ್ಠಿಯಲ್ಲಿ ಜಿ.ಪಂ. ಸದಸ್ಯೆ ಸರೋಜಮ್ಮ, ಬಿಜೆಪಿ ಮಹಿಳಾ ಮೋರ್ಚಾದ ಸದಸ್ಯೆ ಭುವನೇಶ್ವರಿ ಹರೀಶ್, ಬಿಜೆಪಿ ಶನಿವಾರಸಂತೆ ಹೋಬಳಿ ಅಧ್ಯಕ್ಷ ಜಿ.ಸಿ. ಯತೀಶ್ ಹಾಜರಿದ್ದರು.