ಮಡಿಕೇರಿ, ಜು. 16: ಜಿಲ್ಲೆಯಾದ್ಯಂತ ರಸ್ತೆ ಸುರಕ್ಷತೆಗೆ ಸಂಬಂಧಿಸಿದ ಸಂಚಾರಿ ಚಿಹ್ನೆ ಫಲಕಗಳನ್ನು ಅಳವಡಿಸಿ ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿಯವರು ಮಾತನಾಡಿದರು. ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯಲ್ಲಿ ಇರುವಂತಹ ಅನುದಾನವನ್ನು ಬಳಸಿಕೊಂಡು ರಸ್ತೆ ಸುರಕ್ಷತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅವರು ತಿಳಿಸಿದರು. ಪೆÇಲೀಸ್ ಇಲಾಖೆ ಮತ್ತು ಸಾರಿಗೆ ಇಲಾಖೆ ಜಂಟಿಯಾಗಿ ಕೈಗೊಳ್ಳಬೇಕಾದ ಪೂರಕ ಕ್ರಮಗಳನ್ನು ತೆಗೆದುಕೊಂಡು ಸಂಚಾರಿ ಚಿಹ್ನೆ, ಫಲಕಗಳನ್ನು ಜಿಲ್ಲೆಯಾದ್ಯಂತ ಅವಶ್ಯವಿರುವ ಕಡೆಗಳಲ್ಲಿ ಅಳವಡಿಸುವಂತೆ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಮಡಿಕೇರಿ ನಗರದ ನೂತನ ಖಾಸಗಿ ಬಸ್ ನಿಲ್ದಾಣ ಹಾಗೂ ಕುಶಾಲನಗರದ ಖಾಸಗಿ ಬಸ್ ನಿಲ್ದಾಣ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತುರ್ತಾಗಿ ಬಾಕಿ ಉಳಿದಿರುವ ಶೌಚಾಲಯ ವ್ಯವಸ್ಥೆ, ವಿದ್ಯುತ್ ಸಂಪರ್ಕ ಮತ್ತು ಮಳೆ ನೀರು ನಿಲ್ದಾಣದೊಳಗೆ ಬಾರದಂತೆ ಚರಂಡಿ ವ್ಯವಸ್ಥೆ ಹೀಗೆ ಅಗತ್ಯ ಸೌಲಭ್ಯಗಳನ್ನು ಆದ್ಯತೆಯ ಮೇರೆಗೆ ಅಭಿವೃದ್ಧಿ ಪಡಿಸಿ, ಖಾಸಗಿ ಬಸ್ಗಳ ಬಳಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಮಾತನಾಡಿ, ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ್ ಶಿರೊಳ್ಳಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಆರ್. ಶೇಳ, ಕೆಎಸ್ಆರ್ಟಿಸಿ ಮಡಿಕೇರಿ ಘಟಕ ವ್ಯವಸ್ಥಾಪಕಿ ಗೀತಾ, ನಗರಸಭೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಎಂ.ಎಸ್. ರಾಜೇಂದ್ರ ಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಆನಂದ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವಲಿಂಗ ಶೆಟ್ಟಿ, ನಗರಸಭೆ ಕಿರಿಯ ಅಭಿಯಂತರ ನಾಗರಾಜ್ ಇತರರು ಇದ್ದರು.