ಸೋಮವಾರಪೇಟೆ, ಜು. 21: ಕೊರೊನಾ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಗಳ ಪಾತ್ರ ಅತೀ ಮುಖ್ಯವಾಗಿದ್ದು, ತಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಮತ್ತು ನೈರ್ಮಲ್ಯ ಕಾಪಾಡಿಕೊಳ್ಳಬೇಕೆಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಸೂಚಿಸಿದರು.
ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಗಾ.ಪಂ. ಅಭಿವೃದ್ಧಿ ಅಧಿಕಾರಿಗಳು ಹಾಗೂ ವಿವಿಧ ಇಲಾಖಾಧಿಕಾರಿಗಳ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ಗ್ರಾಮ ಪಂಚಾಯಿತಿಗಳೂ ಸಹ ಕಸ ವಿಲೇವಾರಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಬೇಕು. ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಿ ಕೊಳ್ಳುವ ಬಗ್ಗೆ ಆಗಾಗ್ಗೆ ಜಾಗೃತಿ ಮಾಡಿಸಬೇಕೆಂದು ಶಾಸಕರು ತಿಳಿಸಿದರು.
ಶುಚಿತ್ವದಲ್ಲಿ ಗಮನಾರ್ಹವಾಗಿ ಸಾಧನೆ ಮಾಡುವ ಪಂಚಾಯಿಗಳಿಗೆÉ ತಾನು ವೈಯಕ್ತಿಕವಾಗಿ ಬಹುಮಾನ ಕೊಡುತ್ತೇನೆ ಎಂದು ‘ಆಫರ್’ ನೀಡಿದ ಶಾಸಕರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇಚ್ಛಾಶಕ್ತಿಯಿಂದ ಕಾರ್ಯ ನಿರ್ವಹಿಸಬೇಕೆಂದು ಸೂಚನೆ ನೀಡಿದರು.
ಸಭೆಯಲ್ಲಿ ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತೆ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕುರಿತು ತೆಗೆದುಕೊಳ್ಳ ಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಯಿತು.
ಸಭೆಯಲ್ಲೇ ನಿಯಮ ಗಾಳಿಗೆ: ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಗಳು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಗಾಳಿಗೆ ತೂರಲಾಗಿತ್ತು. ಸಭಾಂಗಣದೊಳಗೆ ಸಾಮಾಜಿಕ ಅಂತರ ಕಣ್ಮರೆಯಾಗಿದ್ದರೆ, ಹಲವಷ್ಟು ಅಧಿಕಾರಿಗಳು ಮಾಸ್ಕ್ ಗಳನ್ನು ಗಲ್ಲಕ್ಕೆ ಹಾಕಿಕೊಂಡಿದ್ದರು. ಶಾಸಕ ಅಪ್ಪಚ್ಚು ರಂಜನ್ ಅವರು ಮಾಸ್ಕ್ ಧರಿಸಿ ಮಾತನಾಡುವಂತೆ ಅಧಿಕಾರಿಗಳಿಗೆ ಸೂಚಿಸುತ್ತಿದ್ದರೂ ಸಹ ಅಧಿಕಾರಿಗಳು, ಪಾಲಿಸುವ ಗೋಜಿಗೆ ಹೋಗಲಿಲ್ಲ.
ಸಭೆಯ ವೇದಿಕೆಯಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ಪುಷ್ಪಾ, ಉಪಾಧ್ಯಕ್ಷ ಎಂ.ಬಿ. ಅಭಿಮನ್ಯು ಕುಮಾರ್, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಹೆಚ್.ಎನ್. ತಂಗಮ್ಮ, ತಹಶೀಲ್ದಾರ್ ಗೋವಿಂದ ರಾಜು, ಕಾರ್ಯ ನಿರ್ವಹಣಾಧಿಕಾರಿ ಸುನಿಲ್ ಕುಮಾರ್ ಉಪಸ್ಥಿತರಿದ್ದರು.