ಮಡಿಕೇರಿ, ಜು. 27: ಪ್ರಸ್ತುತ ದಿನದಲ್ಲಿ ಕೋವಿಡ್‍ನೊಂದಿಗೆ ಬದುಕಬೇಕಿರುವ ಹಿನ್ನೆಲೆ ಲಾಕ್‍ಡೌನ್ ಪ್ರಮೇಯ ಬರುವುದಿಲ್ಲ. ಆದ್ದರಿಂದ ಪ್ರವಾಸೋದ್ಯಮ ಕ್ಷೇತ್ರವನ್ನು ಸಾರ್ವಜನಿಕರಿಗೆ ಮುಕ್ತಗೊಳಿಸುವ ನಿಟ್ಟಿನಲ್ಲಿ ಮತ್ತೊಮ್ಮೆ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಸಲಹೆ ಮಾಡಿದ್ದಾರೆ. ಜಿ.ಪಂ. ಸಭಾಂಗಣದಲ್ಲಿ ಸರ್ಕಾರಕ್ಕೆ ವರುಷÀ-ಪರಿಹಾರದ ಸ್ಪರ್ಶ ಕಾರ್ಯಕ್ರಮದ ನಂತರ ಅಧಿಕಾರಿಗಳ ಜೊತೆ ಕೋವಿಡ್-19 ಸಂಬಂಧ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನೇ ನಂಬಿಕೊಂಡು ಹಲವು ಕುಟುಂಬಗಳು ಬದುಕುತ್ತಿವೆ. ಕೋವಿಡ್-19 ನಿಯಂತ್ರಿಸಲು ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಸುವುದು ಹೀಗೆ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಬಳಸಿಕೊಂಡು ಪ್ರವಾಸೋದ್ಯಮಕ್ಕೆ ಗಮನಿಸಬೇಕಿದೆ. ಇಲ್ಲಿನ ಸ್ಥಳೀಯ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.

ಶಾಸಕ ಕೆ.ಜಿ. ಬೋಪಯ್ಯ ಅವರು ಮಾತನಾಡಿ ಕುಶಾಲನಗರ ಮತ್ತಿತರ ಚೆಕ್‍ಪೋಸ್ಟ್‍ಗಳಲ್ಲಿ ಹೊರಗಡೆಯಿಂದ ಬರುವವರ ಬಗ್ಗೆ ನಿಗಾವಹಿಸಬೇಕಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸೂಚಿಸಿದರು.

ಬೆಂಗಳೂರಿನಿಂದ ಸಾಕಷ್ಟು ಮಂದಿ ಕೊಡಗಿಗೆ ಆಗಮಿಸಿದ್ದು, ಇವರು ಎಚ್ಚರಿಕೆಯಿಂದ ಹೋಂ ಕ್ವಾರಂಟೈನ್‍ನಲ್ಲಿ ಇದ್ದರೆ

(ಮೊದಲ ಪುಟದಿಂದ) ಇಷ್ಟೊಂದು ಸೋಂಕು ಹರಡುತ್ತಿರಲಿಲ್ಲ. ಸರಿಯಾಗಿ ಮಾಹಿತಿ ಸಂಗ್ರಹಣೆ ಮಾಡದಿರುವುದರಿಂದ ಈ ರೀತಿಯಾಗಿದೆ ಎಂದು ಅತೃಪ್ತಿ ವ್ಯಕ್ತಪಡಿಸಿದರು.

ಶಾಸಕ ಅಪ್ಪಚ್ಚುರಂಜನ್ ಮಾತನಾಡಿ ಹೊರಗಡೆಯಿಂದ ಬಂದವರು ಕಡ್ಡಾಯವಾಗಿ ಹೋಂ ಕ್ವಾರಂಟೈನ್‍ನಲ್ಲಿ ಇರಬೇಕು. ಕಿಟ್‍ಗಳನ್ನು ಹೆಚ್ಚುವರಿಯಾಗಿ ತರಿಸಿಕೊಳ್ಳಬೇಕು ಎಂದು ಸೂಚಿಸಿದರು.

ಸಂಸದ ಪ್ರತಾಪ್ ಸಿಂಹ ಮಾತನಾಡಿ ಕೋವಿಡ್-19 ನಿಯಂತ್ರಿಸುವ ನಿಟ್ಟಿನಲ್ಲಿ ಆರೋಗ್ಯ ಶಿಬಿರಗಳನ್ನು ಏರ್ಪಡಿಸಬೇಕು. ಇದರಿಂದ ಪ್ರತಿಯೊಬ್ಬರೂ ಪರೀಕ್ಷಿಸಿಕೊಂಡು ಕೋವಿಡ್-19 ನಿಯಂತ್ರಣ ಮಾಡಬಹುದಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಸಣ್ಣಪುಟ್ಟ ಸಮಸ್ಯೆಗಳನ್ನು ಸರಿಪಡಿಸಿಕೊಂಡು ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಕಲ್ಪಿಸಬೇಕು. ಆ ನಿಟ್ಟಿನಲ್ಲಿ ಗಮನಹರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಗೆ ಹೆಚ್ಚುವರಿಯಾಗಿ ಕಿಟ್‍ಗಳು ಬೇಕಿದ್ದಲ್ಲಿ ತರಿಸಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದರು. ಜಿಲ್ಲೆಯ ಹಿತದೃಷ್ಟಿಯಿಂದ ಪ್ರತಿಯೊಬ್ಬರೂ ಕೆಲಸ ಮಾಡಬೇಕು ಎಂದು ಸಚಿವರು ಹೇಳಿದರು.