ಸೋಮವಾರಪೇಟೆ, ಜು. 27: ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಕೊಡಗಿನಲ್ಲಿ ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತ ಉತ್ತಮ ಕೆಲಸ ನಿರ್ವಹಿಸಿದ್ದು, ಸದ್ಯದ ಮಟ್ಟಿಗೆ ಬೆಂಗಳೂರಿನಿಂದ ಬರುವವರನ್ನು ಕಡ್ಡಾಯವಾಗಿ 14 ದಿನಗಳ ಕಾಲ ಹೋಂ ಕ್ವಾರಂಟೈನ್ ಮಾಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಅಧಿಕಾರಿಗಳಿಗೆ ಸೂಚಿಸಿದರು.ಪಶುಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆಯ ವತಿಯಿಂದ ರೂ. 55.80ಲಕ್ಷ ವೆಚ್ಚದಲ್ಲಿ ಸೋಮವಾರಪೇಟೆ ಪಟ್ಟಣ ಮತ್ತು ಅಂಕನಳ್ಳಿಯಲ್ಲಿ ನಿರ್ಮಿಸಿರುವ ಪಶುವೈದ್ಯಕೀಯ ಆಸ್ಪತ್ರೆ ಮತ್ತು ಕಚೇರಿ ಸಂಕೀರ್ಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಉತ್ತಮ ಕೆಲಸ ಮಾಡುತ್ತಿದೆ. ರಾಜ್ಯದ ಮಟ್ಟಿಗೆ ಕೊಡಗಿನ ಸಾಧನೆ ಉತ್ತಮವಾಗಿದೆ. ಇದನ್ನು ಹೀಗೆಯೇ ಕಾಯ್ದು ಕೊಳ್ಳಬೇಕು. ಬೆಂಗಳೂರು ಸೇರಿದಂತೆ ಹೊರ ಭಾಗದಿಂದ ಬರುವವರನ್ನು ಸಂಪರ್ಕ ತಡೆಯಲ್ಲಿರಿಸುವ ಮೂಲಕ ಹಳ್ಳಿಗಳಿಗೆ ಕೊರೊನಾ ಹರಡದಂತೆ ತಡೆಯುವ ಕಾರ್ಯ ಆಗಬೇಕು ಎಂದು ಅಭಿಪ್ರಾಯಿಸಿದರು. ಕೊಡಗಿನಲ್ಲಿ ಕೊರೊನಾ ಪಾಸಿಟಿವ್ ಕೇಸ್‍ಗಳು ಕಡಿಮೆ ಇದೆ. ಜಿಲ್ಲಾಧಿಕಾರಿಗಳು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಸೋಮಣ್ಣ, ಕೊರೊನಾ ಕಾಯಿಲೆ ದೊಡ್ಡದಲ್ಲ; ಆದರೆ ಅದರ ಬಗ್ಗೆ ಜನಸಾಮಾನ್ಯರಲ್ಲಿ ದೊಡ್ಡ ಹೆದರಿಕೆ ಇದೆ. ಇಂತಹ ಸಂದರ್ಭದಲ್ಲಿ ಮಾನಸಿಕವಾಗಿ ಧೈರ್ಯ ತುಂಬುವ ಕೆಲಸ ಆಗಬೇಕು ಎಂದರು.

ಸರ್ಕಾರದಿಂದ ಉತ್ತಮ ಕಾರ್ಯ: ರಾಜ್ಯ ಸರ್ಕಾರ ಕೊಡಗು ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳ ಅಭಿವೃದ್ಧಿಗೆ ಶ್ರಮವಹಿಸುತ್ತಿದೆ. ಪಶುಪಾಲನೆಯಿಂದ ಬದುಕು ಕಟ್ಟಿಕೊಂಡಿರುವ ರೈತರಿಗೆ ಅನುಕೂಲ ಕಲ್ಪಿಸುತ್ತಿದೆ. ಹಾಲಿಗೆ ಬೆಂಬಲ ಬೆಲೆಯನ್ನು ಹೆಚ್ಚಿಸಿದೆ. ಹೈನುಗಾರಿಕೆ ರೈತರ ಆದಾಯದ ಮತ್ತೊಂದು ಮೂಲವಾಗಿದ್ದು, ಪಶುಗಳು ರೈತರ ಬೆನ್ನುಲುಬಾಗಿ ಸೇವೆ ಸಲ್ಲಿಸುತ್ತಿವೆ ಎಂದರು.

ಕೊಡಗಿನಲ್ಲಿ ಸುಸಜ್ಜಿತ ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳ ನಿರ್ಮಾಣಕ್ಕೆ ಸರ್ಕಾರ ಅನುದಾನ ಒದಗಿಸಿದೆ. ಸರ್ಕಾರ ಮತ್ತು ಅಧಿಕಾರಿ ವರ್ಗ ಒಂದೇ ನಾಣ್ಯದ ಎರಡು ಮುಖಗಳಂತೆ ಕೆಲಸ ನಿರ್ವಹಿಸಿದರೆ ಅಭಿವೃದ್ಧಿ ಸಾಧ್ಯ ಎಂದು ಸಚಿವರು ಅಭಿಪ್ರಾಯಿಸಿದರು.

(ಮೊದಲ ಪುಟದಿಂದ) 55 ಲಕ್ಷದ ಕಟ್ಟಡಗಳ ಉದ್ಘಾಟನೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆಯ ವತಿಯಿಂದ ರೂ. 55.80 ಲಕ್ಷ ವೆಚ್ಚದಲ್ಲಿ ಸೋಮವಾರಪೇಟೆ ಪಟ್ಟಣ ಮತ್ತು ಅಂಕನಳ್ಳಿಯಲ್ಲಿ ನಿರ್ಮಿಸಿರುವ ಪಶುವೈದ್ಯಕೀಯ ಆಸ್ಪತ್ರೆ ಮತ್ತು ಕಚೇರಿ ಸಂಕೀರ್ಣವನ್ನು ಸಚಿವರು ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಕಟ್ಟಡಗಳ ನಿರ್ಮಾಣದ ನಂತರ ಅದನ್ನು ಉತ್ತಮವಾಗಿ ನಿರ್ವಹಣೆ ಮಾಡಬೇಕು. ಅಧಿಕಾರಿ ವರ್ಗ ಈ ಬಗ್ಗೆ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಂಸದ ಪ್ರತಾಪ್ ಸಿಂಹ ಮಾತನಾಡಿ, ಚನ್ನರಾಯಪಟ್ಟಣ, ಶನಿವಾರಸಂತೆ, ಸೋಮವಾರಪೇಟೆ, ಮಡಿಕೇರಿ, ವೀರಾಜಪೇಟೆ, ಮಾಕುಟ್ಟ ರಾಜ್ಯ ಹೆದ್ದಾರಿಯನ್ನು 3 ವರ್ಷಗಳ ಹಿಂದೆಯೇ ರಾಷ್ಟ್ರೀಯ ಹೆದ್ದಾರಿ ಎಂದು ಘೋಷಿಸಿದ್ದು, ಸದ್ಯ ಡಿಪಿಆರ್ ಸರ್ವೆ ಪ್ರಗತಿಯಲ್ಲಿದೆ. ಇದು ಮುಕ್ತಾಯಗೊಂಡ ತಕ್ಷಣ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಮಾಹಿತಿ ನೀಡಿದರು.

ಇದರೊಂದಿಗೆ ಕೇಂದ್ರ ಸರ್ಕಾರದಿಂದ ಮೈಸೂರು-ಬೆಂಗಳೂರು ನಡುವೆ 10 ಪಥದ ರಸ್ತೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಶ್ರೀರಂಗಪಟ್ಟಣದಿಂದ ಗುಡ್ಡೆಹೊಸೂರುವರೆಗೆ 4 ಪಥದ ರಸ್ತೆ ಕಾಮಗಾರಿ ವರ್ಷದೊಳಗೆ ಪ್ರಾರಂಭವಾಗಲಿದೆ. ಮೈಸೂರಿನಿಂದ 87 ಕಿ.ಮೀ. ಅಂತರದಲ್ಲಿ ಕೊಡಗಿಗೆ ರೈಲ್ವೇ ಸಂಪರ್ಕ ಕಲ್ಪಿಸುವ 1854 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ ದೊರೆತಿದೆ. ಕೊರೊನಾ ಹಿನ್ನೆಲೆ ಯೋಜನೆಯ ಅನುಷ್ಠಾನದಲ್ಲಿ ಹಿನ್ನೆಡೆಯಾಗಿದ್ದು, ತಕ್ಷಣ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಸಂಸದರು ತಿಳಿಸಿದರು.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಕೊಡಗಿಗೆ 78 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಸೋಮವಾರಪೇಟೆ ತಾಲೂಕಿಗೆ 28 ಕೋಟಿ ಅನುದಾನ ನೀಡಲಾಗಿದೆ. ಇದರೊಂದಿಗೆ ಮಡಿಕೇರಿ-ಸಂಪಾಜೆ ರಸ್ತೆಯಲ್ಲಿ ತಡೆಗೋಡೆ ನಿರ್ಮಾಣಕ್ಕೆ 59 ಕೋಟಿ, ಮಡಿಕೇರಿ-ಕುಶಾಲನಗರದ ರಸ್ತೆ ಡಾಂಬರೀಕರಣಕ್ಕೆ 39 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಪ್ರತಾಪ್ ಸಿಂಹ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಮಾತನಾಡಿ, ಜಿಲ್ಲೆಯಲ್ಲಿ ಪಶುವೈದ್ಯಕೀಯ ಇಲಾಖೆಗೆ ಸಂಬಂಧಿಸಿದಂತೆ 6 ಕಟ್ಟಡಗಳಿಗೆ ಸರ್ಕಾರ ಮಂಜೂರಾತಿ ನೀಡಿದ್ದು, ಈಗಾಗಲೇ 2 ಕಟ್ಟಡಗಳ ಕಾಮಗಾರಿ ಪೂರ್ಣಗೊಂಡಿದೆ. ಮುಂದಿನ ದಿನಗಳಲ್ಲಿ ಶಿರಂಗಾಲ ಮತ್ತು ಕುಶಾಲನಗರದಲ್ಲಿ ಕಟ್ಟಡ ನಿರ್ಮಾಣವಾಗಲಿದೆ ಎಂದರು.

ಪಶುವೈದ್ಯಕೀಯ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ಹಸು ಖರೀದಿಗೆ ರೂ. 40 ಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಈಗಾಗಲೇ 58 ಮಂದಿ ಫಲಾನುಭವಿಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಸ್ಥಾಯಿ ಸಮಿತಿ ಅಧ್ಯಕ್ಷೆ ಕೆ.ಆರ್. ಮಂಜುಳಾ, ತಾ.ಪಂ. ಅಧ್ಯಕ್ಷೆ ಪುಷ್ಪಾ ರಾಜೇಶ್, ಉಪಾಧ್ಯಕ್ಷ ಅಭಿಮನ್ಯುಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ತಂಗಮ್ಮ, ಜಿ.ಪಂ. ಸದಸ್ಯರಾದ ಬಿ.ಜೆ. ದೀಪಕ್, ಪೂರ್ಣಿಮಾ ಗೋಪಾಲ್, ಸರೋಜಮ್ಮ ಅವರುಗಳು ಉಪಸ್ಥಿತರಿದ್ದರು.