ಕುಡಾ ಅಧ್ಯಕ್ಷ ಎಂ.ಎಂ. ಚರಣ್

ಕುಶಾಲನಗರ, ಜು. 28: ಕುಶಾಲನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ಒಳಪಡುವ ವ್ಯಾಪ್ತಿಯಲ್ಲಿ ನಿಯಮಾನುಸಾರ ಬಡಾವಣೆಗಳ ನಿರ್ಮಾಣಕ್ಕೆ ಆದ್ಯತೆ ಕಲ್ಪಿಸುವುದರೊಂದಿಗೆ ಕುಶಾಲನಗರ ಪಟ್ಟಣದಲ್ಲಿ ವಾಣಿಜ್ಯ ಕಟ್ಟಡಗಳ ನಿರ್ಮಾಣಕ್ಕೆ ಉಂಟಾಗಿರುವ ತಾಂತ್ರಿಕ ಸಮಸ್ಯೆಗಳ ಪರಿಹಾರಕ್ಕೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಕುಡಾ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಎಂ.ಎಂ. ಚರಣ್ ಭರವಸೆ ನೀಡಿದ್ದಾರೆ.

ಅವರು ‘ಶಕ್ತಿ’ಯೊಂದಿಗೆ ತಮ್ಮ ಮುಂದಿನ ಅಧಿಕಾರ ಅವಧಿಯಲ್ಲಿ ಹಲವು ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿ ಕುಶಾಲನಗರ ಸೇರಿದಂತೆ ನೆರೆಯ ಕುಡಾ ಆಡಳಿತಕ್ಕೆ ಒಳಪಟ್ಟ ಗ್ರಾಮಗಳ ಅಭಿವೃದ್ಧಿಗೆ ಕ್ರಿಯಾಯೋಜನೆ ರೂಪಿಸುವುದರೊಂದಿಗೆ ನಾಗರಿಕರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಜಿಲ್ಲಾಡಳಿತದ ಸಲಹೆ, ಸಹಕಾರದೊಂದಿಗೆ ಕುಶಾಲನಗರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದ ಚರಣ್, ಆಡಳಿತ ಸಮಿತಿ ಅಧಿಕಾರಿಗಳು, ಸದಸ್ಯರ ಸಲಹೆಯೊಂದಿಗೆ ಸ್ಥಳೀಯ ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಆಡಳಿತಗಳೊಂದಿಗೆ ಚರ್ಚಿಸಿ ನಾಗರಿಕರ ಸಮಸ್ಯೆಗೆ ಪರಿಹಾರ ಕಂಡುಹಿಡಿಯಲಾಗುವುದು. ನದಿ ತಟಗಳ ಅಭಿವೃದ್ಧಿ ಮತ್ತು ನಿರ್ವಹಣೆ ಕಾಮಗಾರಿಗೆ ಸರಕಾರಕ್ಕೆ ಶಾಸಕರ ಮೂಲಕ ಪ್ರಸ್ತಾವನೆಗಳನ್ನು ಸಲ್ಲಿಸುವುದರೊಂದಿಗೆ ಸ್ವಚ್ಛ ಕಾವೇರಿ ನಿರ್ಮಾಣಕ್ಕೆ ಒತ್ತು ನೀಡಲಾಗುವುದು.

ಪಟ್ಟಣದಲ್ಲಿ 3ನೇ ಮಹಡಿ ನಿರ್ಮಾಣಕ್ಕೆ ಉಂಟಾಗಿರುವ ತಾಂತ್ರಿಕ ಅಡಚಣೆ, ಕುಡಾಗೆ ಒಳಪಟ್ಟ ನಿಯಮ ಬಾಹಿರ ಬಡಾವಣೆಗಳ ಪರಿಶೀಲನೆ ನಡೆಸುವುದರೊಂದಿಗೆ ತನ್ನ ಅಧಿಕಾರಾವಧಿಯಲ್ಲಿ ಉತ್ತಮ ಆಡಳಿತ ನೀಡಲು ಶ್ರಮಿಸಲಾಗುವುದು ಎಂದು ತಿಳಿಸಿದ್ದಾರೆ.