ಮಡಿಕೇರಿ, ಜು. 28: ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ ಪ್ರಾಮಾಣಿಕವಾಗಿ ಹಗಲಿರುಳೆನ್ನದೆ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರನ್ನು ರಾಜ್ಯ ಸರ್ಕಾರ ಕಡೆಗಣಿಸಿದೆ ಎಂದು ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕೊಡಗು ಜಿಲ್ಲಾ ಘಟಕ ಆರೋಪಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಯುಟಿಯುಸಿ ರಾಜ್ಯ ಸಮಿತಿ ಸದಸ್ಯ ಚಂದ್ರಶೇಖರ್, ಮೇಟಿ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ ತಾ. 29 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದೆಂದು ತಿಳಿಸಿದರು.

ವಿವಿಧ ಬೇಡಿಕೆಗಳನ್ನು ಈಡೇರಿ ಸುವಂತೆ ಒತ್ತಾಯಿಸಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುವ ಹೋರಾಟವಿದ್ದು, ಇದಕ್ಕೆ ಸಾಂಕೇತಿಕ ಪ್ರತಿಭಟನೆಯ ಮೂಲಕ ಜಿಲ್ಲಾ ಸಂಘ ಬೆಂಬಲ ಸೂಚಿಸುತ್ತದೆ ಎಂದರು.

ಮನೆ ಮನೆಗಳಿಗೆ ತೆರಳಿ ಜನರ ಯೋಗಕ್ಷೇಮ ವಿಚಾರಿಸುತ್ತಿರುವ ಆಶಾ ಕಾರ್ಯಕರ್ತೆಯರ ಸೇವೆಯನ್ನು ಇಡೀ ಗ್ರಾಮೀಣ ಪ್ರದೇಶವೇ ಕೊಂಡಾಡುತ್ತಿದೆ. ಆದರೆ ಕೊರೊನಾ ಸೋಂಕು ವ್ಯಾಪಿಸುತ್ತಿರುವ ಸಂದರ್ಭ ತಮ್ಮ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತರಿಗೆ ಕನಿಷ್ಟ ಸೌಲಭ್ಯವನ್ನು ನೀಡದೆ ಇರುವುದು ಖಂಡನೀಯವೆಂದರು.

ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಕೆಲವು ತಿಂಗಳುಗಳ ಹಿಂದೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಆ ಸಂದರ್ಭ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಏ. 1 ರಿಂದ ಒಂದು ಸಾವಿರ ರೂಪಾಯಿ ಗೌರವ ಧನವನ್ನು ಹೆಚ್ಚಿಸುವುದಾಗಿ ಭರವಸೆ ನೀಡಿದ್ದರು. ಆದರೆ ತಿಂಗಳುಗಳೇ ಕಳೆದರು ವೇತನ ಮಾತ್ರ ಹೆಚ್ಚಾಗಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.

ತಾ. 10 ರಿಂದ ಸಂಪೂರ್ಣ ಕೆಲಸ ಸ್ಥಗಿತಗೊಳಿಸಿ ವಿವಿಧ ಮಾದರಿಯ ಹೋರಾಟಗಳನ್ನು ಹಮ್ಮಿಕೊಳ್ಳುವ ಮೂಲಕ ಸರ್ಕಾರದ ಗಮನ ಸೆಳೆಯಲಾಗಿತ್ತು. ಆದರೆ 16 ದಿನಗಳೇ ಕಳೆದರೂ ಯಾವುದೇ ಸ್ಪಂದನ ದೊರೆತ್ತಿಲ್ಲ. ಈ ಕಾರಣದಿಂದ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುವ ಹೋರಾಟವನ್ನು ರೂಪಿಸಲಾಗಿದೆ ಎಂದು ತಿಳಿಸಿದ ಅವರು, ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯ ವಿವಿಧ ತಾಲೂಕುಗಳ ಮೂವತ್ತು ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರತಿಭಟನೆ ನಡೆಸಲಿದ್ದಾರೆ ಎಂದರು.

ಸಂಘದ ಜಿಲ್ಲಾಧ್ಯಕ್ಷೆ ತೆಕ್ಕಡೆ ಪೂರ್ಣಿಮಾ ಬಸಪ್ಪ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ 480 ಆಶಾ ಕಾರ್ಯಕರ್ತೆಯರಿದ್ದು, ಕಳೆದ 12 ವರ್ಷಗಳಿಂದ ಕಾರ್ಯನಿರ್ವಹಿಸು ತ್ತಿದ್ದಾರೆ. ಕೊಡಗಿನಂತ ಬೆಟ್ಟಗುಡ್ಡದ ಪ್ರದೇಶದಲ್ಲಿ ಶ್ರಮವಹಿಸಿ ಗರ್ಭಿಣಿ ಮಹಿಳೆಯರ ಸುರಕ್ಷತೆ, ಹೆರಿಗೆ, ಆರೈಕೆ ಹಾಗೂ ಆರೋಗ್ಯದ ಬಗ್ಗೆ ಗಮನ ಹರಿಸಿ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

ಗೋಷ್ಠಿಯಲ್ಲಿ ತಾಲೂಕು ಸಮಿತಿ ಸದಸ್ಯೆ ಝರಾ ಉಪಸ್ಥಿತರಿದ್ದರು.