ಮಡಿಕೇರಿ, ಆ. 4: ಕೊಡಗು ಮತ್ತು ಕೇರಳಕ್ಕೆ ಸಂಪರ್ಕ ಕಲ್ಪಿಸುವ ಕರಿಕೆ ಹಾಗೂ ಕುಟ್ಟ ರಸ್ತೆಗಳನ್ನು ಸಂಚಾರಕ್ಕೆ ಮುಕ್ತಗೊಳಿಸಬೇಕೆಂದು ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ಒತ್ತಾಯಿಸಿದ್ದು, ತಪ್ಪಿದಲ್ಲಿ ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೊರೊನಾ ನಿರ್ಬಂಧಗಳನ್ನು ಸಡಿಲಿಸಿ ಎಲ್ಲಾ ಮಾರ್ಗಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದರೂ ಕೊಡಗು ಜಿಲ್ಲೆಯಲ್ಲಿ ಮಾತ್ರ ಪ್ರತ್ಯೇಕ ನಿಯಮ ಪಾಲನೆಯಾಗುತ್ತಿದೆ. ಜಿಲ್ಲಾಡಳಿತ ಸರ್ಕಾರದ ಆದೇಶದಂತೆ ನಡೆದುಕೊಳ್ಳದೆ ಶಾಸಕರುಗಳ ಮಾತು ಕೇಳಿಕೊಂಡು ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಕರಿಕೆ ಮತ್ತು ಕುಟ್ಟ ಗ್ರಾಮದ ಜನಸಾಮಾನ್ಯರು ನಿತ್ಯ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಮಣ್ಣು ಹಾಕಿ ರಸ್ತೆ ಸಂಪರ್ಕ ಕಡಿತಗೊಳಿಸಿರುವುದರಿಂದ ಪಕ್ಕದ ಊರುಗಳಿಗೆ ತೆರಳಿ ಅಗತ್ಯ ವಸ್ತುಗಳನ್ನು ಕೊಳ್ಳಲಾಗದೆ ಮತ್ತು ತುರ್ತು ಅನಾರೋಗ್ಯ ಪೀಡಿತರನ್ನು ಆಸ್ಪತ್ರೆಗೆ ಕರೆದೊಯ್ಯಲಾಗದೆ ಪರದಾಡುತ್ತಿದ್ದಾರೆ. ಮಳೆ ಕೂಡ ತೀವ್ರತೆಯನ್ನು ಪಡೆದುಕೊಳ್ಳುತ್ತಿದ್ದು, ಮರ, ಬರೆ ಬಿದ್ದರೆ ಸಂಪೂರ್ಣ ಸಂಪರ್ಕವೇ ಕಡಿತಗೊಂಡು ಗ್ರಾಮಸ್ಥರು ದ್ವೀಪದಲ್ಲಿ ಸಿಲುಕಿದಂತೆ ಅತಂತ್ರ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಗಣೇಶ್ ಆತಂಕ ವ್ಯಕ್ತಪಡಿಸಿದ್ದಾರೆ.