ಮಡಿಕೇರಿ, ಆ. 7: ಜಿಲ್ಲೆಯಲ್ಲಿ ಎಡೆಬಿಡದೆ ಧಾರಾಕಾರ ಮಳೆ ಸುರಿಯುತ್ತಿದ್ದು, ಪ್ರವಾಹ ಉಂಟಾಗುವ ಪ್ರದೇಶ, ತಗ್ಗು ಪ್ರದೇಶದಲ್ಲಿ ವಾಸಿಸುವ ಜನರನ್ನು ಸ್ಥಳಾಂತರಿಸುವುದು ಹಾಗೂ ಕೋವಿಡ್-19 ನಿಯಂತ್ರಿಸುವಲ್ಲಿ ಅಧಿಕಾರಿಗಳು ತಂಡವಾಗಿ ಕಾರ್ಯನಿರ್ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ಅವರು ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಕೋವಿಡ್ ನಿಯಂತ್ರಣ ಹಾಗೂ ಪ್ರಕೃತಿ ವಿಕೋಪ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು.

ತಗ್ಗು ಪ್ರದೇಶದಲ್ಲಿ ವಾಸಿಸುವ ಮತ್ತು ಪ್ರವಾಹ ಪೀಡಿತ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು. ಮೊದಲು ಜೀವ ರಕ್ಷಣೆಯತ್ತ ಪ್ರತಿಯೊಬ್ಬರೂ ಗಮನಹರಿಸಬೇಕು ಎಂದು ಸಲಹೆ ಮಾಡಿದರು.

ಗ್ರಾ.ಪಂ., ಪ.ಪಂ. ನಗರಸಭೆಗೆ ಈಗಾಗಲೇ ಹಣ ಬಿಡುಗಡೆ ಮಾಡಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸ್ನೇಹ ಮಾಹಿತಿ ನೀಡಿದರು.

ಜಿ.ಪಂ ಸಿಇಒ ಕೆ.ಲಕ್ಷ್ಮೀ ಪ್ರಿಯ, ಕೊಡಗು ವೈದ್ಯಕೀಯ ಸಂಸ್ಥೆಯ ನಿರ್ದೇಶಕ ಡಾ.ಕಾರ್ಯಪ್ಪ, ಅಧೀಕ್ಷಕ ಲೋಕೇಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಮಹೇಶ್, ಸೆಸ್ಕ್ ಇಇ ಸೋಮಶೇಖರ್, ಪಶುಪಾಲನಾ ಇಲಾಖೆಯ ಉಪ ನಿರ್ದೆಶಕ ಡಾ.ತಮ್ಮಯ್ಯ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ರಾಘವೇಂದ್ರ, ನಾನಾ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.