ಮಡಿಕೇರಿ, ಆ. 15: ಕೊಡಗಿನಲ್ಲಿ ಪ್ರಕೃತಿ ವಿಕೋಪದಿಂದ ಇದುವರೆಗೆ 342 ವಾಸದ ಮನೆಗಳು ಹಾನಿಗೊಳಗಾಗಿದ್ದು, 34170 ಹೆಕ್ಟೇರ್ ಬೆಳೆ ನಾಶವಾಗಿದೆ. ಬೆಳೆ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ಒದಗಿಸುವದರ ಜೊತೆಗೆ ನಿರಾಶ್ರಿತರ ಬದುಕನ್ನು ಕಟ್ಟಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಭರವಸೆಯಿತ್ತರು.

ನಗರದ ಕೋಟೆ ಆವರಣದಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆದ 74ನೇ ಸ್ವಾತಂತ್ರ್ಯೋತ್ಸದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಸ್ವಾಂತಂತ್ರ್ಯೋತ್ಸವ ಸಂದೇಶ ನೀಡಿದರು.

ಸ್ವಾತಂತ್ರ್ಯಕ್ಕಾಗಿ ಪ್ರಾಣ ಬಲಿದಾನಗೈದ ಮಹನೀಯರ ಆದರ್ಶವನ್ನು ಗೌರವಿಸಿ ಸಾಮರಸ್ಯದಿಂದ ಬಾಳ್ವೆ ನಡೆಸುವ ಜವಾಬ್ದಾರಿ ನಮ್ಮದು. ಸ್ವಾತಂತ್ರ್ಯ ಚಳುವಳಿಯಲ್ಲಿ ಹೋರಾಡಿದ ಕೊಡಗಿನ ಹೋರಾಟಗಾರರ ಹೆಸರುಗಳನ್ನು ಉಲ್ಲೇಖಿಸಿದ ಸಚಿವರು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ, ಜನರಲ್ ತಿಮ್ಮಯ್ಯ ಭಾರತೀಯ ಸೇನಾ ಇತಿಹಾಸದಲ್ಲಿ ಎಂದಿಗೂ ಮರೆಯಲಾಗದ ರತ್ನಗಳು ಎಂದು ಅವರು ಹೇಳಿದರು. ಕೊಡಗು ಭಾರತದ ಸ್ವಾತಂತ್ರ್ಯ ಚಳುವಳಿಯ ಒಂದು ಭಾಗವಾಗಿ ತನ್ನದೇ ಆದ ಮಹತ್ವವನ್ನು ಪಡೆದುಕೊಂಡಿದೆ ಎಂದರು.

ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸರ್ಕಾರ ಕರ್ನಾಟಕದ ಅಭಿವೃದ್ಧಿಗೆ ಹೊಸ ಆಯಾಮ ನೀಡಲು ದೃಢ ಸಂಕಲ್ಪ ಮಾಡಿದೆ. ಕೋವಿಡ್ ಸಂದರ್ಭದಲ್ಲಿ ಎಲ್ಲಾ ಬಡ ಕುಟುಂಬಗಳಿಗೆ ಆಹಾರ ಪೂರೈಕೆಯೊಂದಿಗೆ ಸಂಕಷ್ಟದಲ್ಲಿ ದ್ದವರಿಗೆ ಪರಿಹಾನ ಧನ ವಿತರಣೆ ಮಾಡಲಾಗಿದೆ. ಕೋವಿಡ್ ಆಸ್ಪತ್ರೆಯಲ್ಲಿ ಸೋಂಕಿತ ವ್ಯಕ್ತಿಗಳ ಚಿಕಿತ್ಸೆಗಾಗಿ 250 ಹಾಸಿಗೆಗಳನ್ನು ವ್ಯವಸ್ಥೆ ಮಾಡಲಾಗಿದ್ದು, 155 ಪಾಯಿಂಟ್‍ಗಳ ಕೇಂದ್ರೀಕೃತ ಆಕ್ಸಿಜನ್ ಪೈಪ್‍ಲೈನ್‍ಗಳ ವ್ಯವಸ್ಥೆ ಮಾಡಲಾಗಿದೆ ಮತ್ತು 56 ಹಾಸಿಗೆಗಳ ಐಸಿಯು ಘಟಕವನ್ನು ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ವ್ಯವಸ್ಥೆ ಮಾಡಲಾಗಿದೆ.

ಜಿಲ್ಲೆಯ ತಾಲೂಕು ಕೇಂದ್ರ ಗಳಲ್ಲೂ ಕೋವಿಡ್ ಕೇರ್ ಸೆಂಟರ್ ಗಳನ್ನು ಸ್ಥಾಪಿಸಿ ಲಕ್ಷಣ ಇಲ್ಲದಿರುವ ಕೋವಿಡ್ ಸೋಂಕಿತರನ್ನು ಈ ಕೇಂದ್ರಗಳಲ್ಲಿಟ್ಟು ಆರೈಕೆ ಮಾಡಲಾ ಗುತ್ತಿದೆ. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಂದಾಜು 100 ಕೋಟಿ ರೂ. ವೆಚ್ಚದಲ್ಲಿ 450 ಹಾಸಿಗೆ ಸಾಮಥ್ರ್ಯದ ಹೆಚ್ಚುವರಿ ಕಟ್ಟಡ ನಿರ್ಮಾಣಕ್ಕೆ ಈಗಾಗಲೇ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2020-21ನೇ ಸಾಲಿನಲ್ಲಿ ರೂ. 29.15 ಕೋಟಿ ಗುರಿಗೆ ಎದುರಾಗಿ ರೂ. 15.31 ಕೋಟಿ ವೆಚ್ಚವಾಗಿದ್ದು, ಜಿಲ್ಲೆಯಲ್ಲಿ ಶೇ. 52.51 ಸಾಧನೆಯಾಗಿದೆ.

ವಿವಿಧ ವಸತಿ ಯೋಜನೆಯಡಿ ಇಲ್ಲಿಯವರೆಗೆ 14,157 ಫಲಾನುಭವಿ ಗಳನ್ನು ಆಯ್ಕೆ ಮಾಡಿದ್ದು, 9,594 ಮನೆಗಳನ್ನು ಪೂರ್ಣಗೊಳಿಸಲಾಗಿದೆ. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಗಳಲ್ಲಿ ಘನ ತ್ಯಾಜ್ಯ ವಸ್ತುಗಳ ನಿರ್ವಹಣೆಗೆ ರಾಜ್ಯದಿಂದ ಕ್ರಿಯಾ ಯೋಜನೆಗೆ ಅನುಮೋದನೆ ಪಡೆಯುವಲ್ಲಿ ಕೊಡಗು ಜಿಲ್ಲೆ ಪ್ರಥಮವಾಗಿದ್ದು, ಘನ ತ್ಯಾಜ್ಯ ವಿಲೇವಾರಿಗೆ 69 ತ್ಯಾಜ್ಯ ಸಂಗ್ರಹಣಾ ವಾಹನಕ್ಕೆ ಟೆಂಡರ್ ಪ್ರಕ್ರಿಯೆ ಪೂರ್ಣ ಗೊಂಡಿದ್ದು,

(ಮೊದಲ ಪುಟದಿಂದ) ಸೆಪ್ಟೆಂಬರ್ ಮೊದಲನೇ ವಾರದಲ್ಲಿ ವಾಹನಗಳನ್ನು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲಾಗುವದು ಎಂದರು.

ಮಡಿಕೇರಿಯಲ್ಲಿರುವ ಇತಿಹಾಸ ಪ್ರಸಿದ್ಧ ಹಳೇ ಕೋಟೆಯನ್ನು ಸಂರಕ್ಷಿಸುವ ಉದ್ದೇಶದಿಂದ ಭಾರತೀಯ ಪುರಾತತ್ವ ಇಲಾಖೆ ಮುಖಾಂತರ ರಕ್ಷಣಾ ಕಾರ್ಯವನ್ನು ಕೈಗೊಂಡಿದ್ದು, ಈ ಸಂಬಂಧ ಸರ್ಕಾರದಿಂದ ರೂ. 10.76 ಕೋಟಿ ಭಾರತೀಯ ಪುರಾತತ್ವ ಇಲಾಖೆಗೆ ಬಿಡುಗಡೆ ಮಾಡಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ.

2019ರ ಪ್ರಕೃತಿ ವಿಕೋಪದಿಂದ ಜಿಲ್ಲೆಯಲ್ಲಿ ಸಂಪೂರ್ಣ ಹಾನಿಯಾದ ‘ಎ’ ವರ್ಗದ 383 ಮನೆಗಳಿಗೆ ರೂ. 3.56 ಕೋಟಿ ಪರಿಹಾರ, ಭಾಗಶಃ ಹಾನಿಯಾದ ‘ಬಿ’ ವರ್ಗದ 442 ಮನೆಗಳಿಗೆ ರೂ.3.47 ಕೋಟಿ ಪರಿಹಾರ ಹಾಗೂ ಅಲ್ಪ ಸ್ವಲ್ಪ ಹಾನಿಯಾದ ‘ಸಿ’ ವರ್ಗದ 1591 ಮನೆಗಳಿಗೆ ರೂ. 7.96 ಕೋಟಿ ಪರಿಹಾರ ಹೀಗೆ ಒಟ್ಟು 2416 ಮನೆಗಳಿಗೆ 14.98 ಕೋಟಿ ರೂ.ಗಳ ಪರಿಹಾರವನ್ನು ರಾಜೀವ್ ಗಾಂಧಿ ವಸತಿ ನಿಗಮದಿಂದ ಈಗಾಗಲೇ ಬಿಡುಗಡೆ ಮಾಡಲಾಗಿದೆ.

ಜಿಲ್ಲಾಡಳಿತದಿಂದ ಪ್ರಕೃತಿ ವಿಕೋಪ ಸಂಬಂಧ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರೂ ಸಹ ಅತಿವೃಷ್ಠಿಯಿಂದ ಜಿಲ್ಲೆಯ ತಲಕಾವೇರಿಯಲ್ಲಿ ಭೂಕುಸಿತದಿಂದ ಪ್ರಧಾನ ಅರ್ಚಕರು ಸೇರಿದಂತೆ 5 ಮಂದಿ ಮೃತಪಟ್ಟಿರುವದು ವಿಷಾದದ ಸಂಗತಿಯಾಗಿದೆ. ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದ ಈವರೆಗೆ ಅಂದಾಜು 389.34 ಕೋಟಿ ಮೌಲ್ಯದ ವಿವಿಧ ಇಲಾಖೆಗಳ ಮೂಲಭೂತ ಸೌಕರ್ಯಗಳು ಹಾನಿಯಾಗಿದ್ದು, ಪುನರ್ ನಿರ್ಮಾಣ ಮಾಡಲು ಅಗತ್ಯ ಕ್ರಮವಹಿಸಲಾಗುವದು ಎಂದು ಸಚಿವ ಸೋಮಣ್ಣ ನುಡಿದರು.

ಈ ಸಂದರ್ಭ ಸಂಸದ ಪ್ರತಾಪ್ ಸಿಂಹ, ಶಾಸಕ ಅಪ್ಪಚ್ಚುರಂಜನ್ ವಿಧಾನ ಪರಿಷತ್ ಸದಸ್ಯರುಗಳಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಪೊಲೀಸ್ ವರಿಷ್ಠಾಧಿಕಾರಿ ಕ್ಷಮಮಿಶ್ರಾ, ಸಿಇಓ ಲಕ್ಷ್ಮಿಪ್ರಿಯ, ತಹಶೀಲ್ದಾರ್ ಮಹೇಶ್ ಮತ್ತಿತರರು ಹಾಜರಿದ್ದರು.