ಮಡಿಕೇರಿ, ಆ. 20 : ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಜನಧ್ವನಿ ಘೋಷ ವಾಕ್ಯದೊಂದಿಗೆ ನಗರದಲ್ಲಿ ಪ್ರತಿಭಟನೆ ನಡೆಸಿತು.

ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯ ಕರ್ತರು ಸರ್ಕಾರ ಗಳ ವಿರುದ್ಧ ಧಿಕ್ಕಾರ ಕೂಗಿದರು.

ಈ ಸಂದರ್ಭ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್, ಇಡೀ ವಿಶ್ವವೇ ಕೋವಿಡ್ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಮಾತ್ರ ಭ್ರಷ್ಟಾಚಾರದಲ್ಲಿ ತೊಡಗಿದೆ.

ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸಲಾಗುತ್ತಿದೆ, ಅಲ್ಲದೆ ಕೋವಿಡ್ ಪರಿಸ್ಥಿತಿಯಲ್ಲೂ ಜೀವದ ಹಂಗು ತೊರೆದು ದುಡಿಯುತ್ತಿರುವ ಆರೋಗ್ಯ ಸಿಬ್ಬಂದಿಗಳಿಗೂ ಸೂಕ್ತ ಸಂಭಾವನೆ ನೀಡದೆ ವಂಚಿಸಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ವರ್ಷ ಜಿಲ್ಲೆಯಲ್ಲಿ ಅತಿವೃಷ್ಟಿಯಾದ ಸಂದರ್ಭ ರಾಜ್ಯ ಸರ್ಕಾರ ದೊಡ್ಡ ಮೊತ್ತದ ಪರಿಹಾರ ಬಿಡುಗಡೆ ಮಾಡುವ ಭರವಸೆ ನೀಡಿತ್ತು. ಆದರೆ ಇಲ್ಲಿಯವರೆಗೆ ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಮತ್ತು ವಸತಿ ಸೌಲಭ್ಯ ದೊರೆತ್ತಿಲ್ಲ. ಈ ಬಾರಿಯೂ ಧಾರಾಕಾರ ಮಳೆಯಿಂದ ಕೋಟ್ಯಾಂತರ ರೂಪಾಯಿ ನಷ್ಟವಾಗಿದ್ದು, ತಕ್ಷಣ ಹಣ ಬಿಡುಗಡೆ ಮಾಡಬೇಕು ಎಂದರು.

ಕೆಪಿಸಿಸಿ ಪ್ರಮುಖರಾದ ಮಿಟ್ಟು ಚಂಗಪ್ಪ, ಟಿ.ಪಿ.ರಮೇಶ್, ನಟೇಶ್ ಗೌಡ, ಎಪಿಎಂಸಿ ಮಾಜಿ ಅಧ್ಯಕ್ಷರಾದ ಜಯಂತಿ, ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷ ನೆರವಂಡ ಉಮೇಶ್, ಡಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ಸದಸ್ಯ ಪುಷ್ಪಾಪೂಣಚ್ಚ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ರಾಜೀವ್ ಗಾಂಧಿ ಪಂಚಾಯತ್‍ರಾಜ್ ಸಂಯೋಜಕ ತೆನ್ನಿರಾ ಮೈನಾ, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಹೊಸೂರು ಸೂರಜ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ನಗರ ಕಾಂಗ್ರೆಸ್ ಅಧ್ಯಕ್ಷ ಕೆ.ಯು. ಅಬ್ದುಲ್ ರಜಾಕ್, ಯುವ ಕಾಂಗ್ರೆಸ್ ಅಧ್ಯಕ್ಷ ಹನೀಪ್ ಸಂಪಾಜೆ, ಸೇವಾದಳದ ಜಿಲ್ಲಾಧ್ಯಕ್ಷ ಚಿಲುವಂಡ ಕಾವೇರಪ್ಪ, ನಗರ ಮಹಿಳಾ ಘಟಕದ ಅಧ್ಯಕ್ಷೆ ಪಾರ್ವತಿ ಫ್ಯಾನ್ಸಿ, ರಾಹುಲ್ ಬ್ರಿಗೇಡ್‍ನ ಅಧ್ಯಕ್ಷ ಚುಮ್ಮಿದೇವಯ್ಯ, ಯುವ ಘಟಕದ ಅಧ್ಯಕ್ಷ ಸದಾ ಮುದ್ದಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.