ಸಿದ್ದಾಪುರ, ಆ. 21: ಕಾಫಿ ತೋಟದಲ್ಲಿ ಬೀಡು ಬಿಟ್ಟಿದ್ದ ಒಂಟಿ ಸಲಗವೊಂದನ್ನು ಕಾಡಿಗೆ ಅಟ್ಟುವಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ವೀರಾಜಪೇಟೆ ವಲಯ ಅರಣ್ಯ ವ್ಯಾಪ್ತಿಗೆ ಒಳಪಡುವ ಹೊಸೂರು ಬೆಟ್ಟಗೇರಿ, ಕಳತ್ಮಾಡು ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟು ದಾಂಧಲೆ ನಡೆಸುತ್ತಿದ್ದವು. ಕೃಷಿ ಫಸಲುಗಳನ್ನು ನಾಶಪಡಿಸುತ್ತಿದ್ದವು.

ಕಾಡಾನೆಗಳ ಹಿಂಡಿನ ಪೈಕಿ ಒಂಟಿ ಸಲಗವೊಂದು ಗ್ರಾಮದ ಕಾಫಿ ತೋಟಗಳಲ್ಲಿ ಬೆಳೆಸಿದ್ದ ಕೃಷಿ ಫಸಲುಗಳನ್ನು ಹಾಗೂ ತೆಂಗಿನ ಮರಗಳನ್ನು ಎಳೆದು ಹಾಕಿ ಧ್ವಂಸಗೊಳಿಸಿತ್ತು, ಇದಲ್ಲದೇ ಮಾನವನ ಮೇಲೆ ಕೂಡ ದಾಳಿ ನಡೆಸುತ್ತಿತ್ತು ಎನ್ನಲಾಗಿದೆ. ಇದರಿಂದ ಭಯಭೀತರಾದ ಗ್ರಾಮಸ್ಥರು ಉಪಟಳ ನೀಡುತ್ತಿರುವ ಪುಂಡಾನೆಯನ್ನು ಕಾಡಿಗೆ ಅಟ್ಟುವಂತೆ ಒತ್ತಾಯಿಸಿದ್ದರು.

ಈ ಹಿನ್ನೆಲೆಯಲ್ಲಿ ಶುಕ್ರವಾರದಂದು ಉಪ ವಲಯ ಅರಣ್ಯ ಅಧಿಕಾರಿ ಮನೋಜ್ ರವರ ನೇತೃತ್ವದಲ್ಲಿ ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ನಡೆಸಲಾಯಿತು. ಬೆಳಗ್ಗಿನಿಂದ ಪಟಾಕಿ ಸಿಡಿಸಿ ಕಾರ್ಯಾಚರಣೆ ನಡೆಸುವ ಸಂದರ್ಭ ಒಂಟಿ ಸಲಗವು ಕಾಫಿ ತೋಟವನ್ನು ಬಿಟ್ಟು ಕದಲಲು ಹಿಂದೇಟು ಹಾಕುತ್ತಿತ್ತು. ಅಲ್ಲದೇ ಅರಣ್ಯ ಅಧಿಕಾರಿಗಳನ್ನು ಹಾಗೂ ಸಿಬ್ಬಂದಿಗಳನ್ನು ತೋಟದ ಸುತ್ತಲೂ ಸುತ್ತಾಡಿಸಿ ಬೆವರಿಳಿಸಿತು ಎಂದು ಅರಣ್ಯ ಸಿಬ್ಬಂದಿಗಳು ತಿಳಿಸಿದ್ದಾರೆ. ಆದರೆ ಛಲ ಬಿಡದ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶ್ರಮವಹಿಸಿ ಕೊನೆಗೂ ಪುಂಡಾನೆಯನ್ನು ಅರಣ್ಯಕ್ಕೆ ಅಟ್ಟಲು ಮುಂದಾದರು.

ವೀರಾಜಪೇಟೆ ತಾಲೂಕು ಡಿ.ಸಿ.ಎಫ್. ರೋಶ್ನಿ ಮಾರ್ಗದರ್ಶನದಲ್ಲಿ ವಲಯ ಅರಣ್ಯ ಅಧಿಕಾರಿ ದಿಲೀಪ್ , ಉಪ ವಲಯ ಅರಣ್ಯ ಅಧಿಕಾರಿ ಮನೋಜ್, ಧಮೇರ್ಂದ್ರ ಸೇರಿದಂತೆ ಹನ್ನೆರಡಕ್ಕೂ ಅಧಿಕ ಮಂದಿ ಅರಣ್ಯ ಸಿಬ್ಬಂದಿಗಳು ಹಾಗೂ ಆರ್.ಆರ್.ಟಿ ತಂಡದ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. -ವಾಸು ಎ.ಎನ್.