ಪೆÇನ್ನಂಪೇಟೆ, ಆ. 26: ದೇಶದ ಆರ್ಥಿಕತೆಯ ಬೆನ್ನೆಲುಬಾಗಿರುವ ರೈತರು ಮತ್ತು ಕೃಷಿ ಕಾರ್ಮಿಕರು ಕೊಡಗಿನಲ್ಲಿ ನಿರಂತರವಾಗಿ ಸಂಕಷ್ಟ ಎದುರಿಸುತ್ತಿದ್ದಾರೆ. ಇವರ ಸಮಸ್ಯೆಗೆ ಶಾಶ್ವತ ಪರಿಹಾರ ತೀರಾ ಅಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಹಿರಿಯ ಸದಸ್ಯ ಮೂಕೊಂಡ ವಿಜು ಸುಬ್ರಮಣಿ ಹೇಳಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಮತ್ತು ಕೃಷಿ ಕಾರ್ಮಿಕರ ಬಗ್ಗೆ ಅಧಿಕಾರಿಗಳ ನಿರ್ಲಕ್ಷ್ಯ ಸಲ್ಲದು. ಹಲವು ದಶಕಗಳಿಂದ ಅವರು ಎದುರಿಸುತ್ತಿರುವ ಮೂಲಭೂತ ಸಮಸ್ಯೆಗಳಿಗೆ ವೈಜ್ಞಾನಿಕ ಮಾದರಿಯಲ್ಲಿ ಸರಕಾರದ ಪರಿಹಾರ ವಿತರಣೆಯೇ ಸೂಕ್ತ ಮಾರ್ಗೋಪಾಯವಾಗಿದೆ. ಇದಕ್ಕೆ ಶಾಶ್ವತ ಪರಿಹಾರ ಯೋಜನೆ ರೂಪುಗೊಳ್ಳಬೇಕು ಎಂದರಲ್ಲದೆ, ಕೊಡಗಿನಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಆನೆ-ಮಾನವ ಸಂಘರ್ಷದಿಂದ ರೈತರ ಮತ್ತು ಕೃಷಿ ಕಾರ್ಮಿಕರ ಬದುಕು ದುಸ್ತರವಾಗುತ್ತಿದೆ. ಇದನ್ನು ವೈಜ್ಞಾನಿಕವಾಗಿ ತಡೆಗಟ್ಟಲು ಕೂಡ ಶಾಶ್ವತ ಪರಿಹಾರ ಯೋಜನೆಯ ಅಗತ್ಯವಿದೆ ಎಂದು ಒತ್ತಿ ಹೇಳಿದರು.
ರೈತರ ಮತ್ತು ಕೃಷಿ ಕಾರ್ಮಿಕರ ನೈಜ ಸ್ಥಿತಿಯನ್ನು ಪರಿಶೀಲಿಸಲು ಕೃಷಿ, ತೋಟಗಾರಿಕೆ, ಕಂದಾಯ ಮತ್ತು ಅರಣ್ಯ ಇಲಾಖೆಯ ಪ್ರಾಮಾಣಿಕ ಮತ್ತು ಉನ್ನತ ಅಧಿಕಾರಿಗಳನ್ನು ಒಳಗೊಂಡ ಜಿಲ್ಲಾ ಮಟ್ಟದ ‘ಕಾರ್ಯಪಡೆ’ ರಚನೆಯಾಗಬೇಕು ಎಂದು ಆಗ್ರಹಿಸಿದರು.
ಅರಣ್ಯದಂಚಿನಲ್ಲಿ ಆನೆ ಕಂದಕ (ಇ.ಪಿ.ಟಿ.) ನಿರ್ಮಾಣ ಮತ್ತು ರೈಲು ಕಂಬಿಗಳ ತಡೆಬೇಲಿ ಕಾಮಗಾರಿ ವೈಜ್ಞಾನಿಕ ನೆಲೆಗಟ್ಟಿನಲ್ಲಿ ನಡೆಯಬೇಕು. ಇಂದಿನ ಕಾಲಕ್ಕೆ ಅನುಗುಣವಾಗಿ ಸಂತ್ರಸ್ತ ರೈತರಿಗೆ ಸೂಕ್ತ ಪರಿಹಾರವನ್ನು ಸಕಾಲದಲ್ಲೇ ನೀಡಬೇಕು. ಜಿಲ್ಲಾಧಿಕಾರಿಗಳು ಕೂಡ ರೈತರ ಮತ್ತು ಕೃಷಿ ಕಾರ್ಮಿಕರ ಕುರಿತು ವಿಶೇಷ ಆಸಕ್ತಿ ವಹಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.