ಸೋಮವಾರಪೇಟೆ, ಆ. 28: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಡಿ ಗ್ರೂಪ್ ನೌಕರರಿಗೆ ಸೂಕ್ತ ಸಮಯದಲ್ಲಿ ವೇತನ ಒದಗಿಸಲು ಸಂಬಂಧಿಸಿದ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಶಿವರಾಮೇಗೌಡ ಬಣದ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ವೇದಿಕೆಯ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ, ಕೊರೊನಾ ವಾರಿಯರ್ಸ್ ಆಗಿ ಕರ್ತವ್ಯ ನಿರ್ವಹಿಸಿರುವ ಡಿ ಗ್ರೂಪ್ ನೌಕರರಿಗೆ ಸರಿಯಾದ ಸಮಯಕ್ಕೆ ವೇತನ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಕಳೆದ ತಿಂಗಳ ವೇತನವನ್ನು ಇಂದಿಗೂ ಬಟವಾಡೆ ಮಾಡಿಲ್ಲ. ಇದರಿಂದಾಗಿ ಬಡ ಮಂದಿಯ ಜೀವನ ಸಂಕಷ್ಟಕ್ಕೆ ಸಿಲುಕಿದ್ದು, ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಗಮನಹರಿಸಬೇಕು. ಗುತ್ತಿಗೆದಾರರ ಏಜೆನ್ಸಿಯನ್ನು ಸಂಪರ್ಕಿಸಿದರೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಇದರೊಂದಿಗೆ ಪಿ.ಎಫ್.ನಲ್ಲಿಯೂ ಪಾರದರ್ಶಕತೆ ಕಾಯ್ದುಕೊಳ್ಳುತ್ತಿಲ್ಲ. ಸಮವಸ್ತ್ರವನ್ನೂ ನೀಡಿಲ್ಲ ಎಂದು ಫ್ರಾನ್ಸಿಸ್ ದೂರಿದ್ದಾರೆ.
ಸರ್ಕಾರಿ ಆಸ್ಪತ್ರೆಯಲ್ಲಿ ದುಡಿಯುತ್ತಿರುವ ಡಿ ಗ್ರೂಪ್ ನೌಕರರಿಗೆ ಪತ್ರಿ ತಿಂಗಳು 5ನೇ ತಾರೀಕಿನೊಳಗೆ ಸಂಬಳ ನೀಡಬೇಕು. ವೇತನವನ್ನು 15 ಸಾವಿರಕ್ಕೆ ಹೆಚ್ಚಳ ಮಾಡಬೇಕು. ತಪ್ಪಿದ್ದಲ್ಲಿ ಕರವೇ ವತಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳು ವದಾಗಿ ಎಚ್ಚರಿಕೆ ನೀಡಿದ್ದಾರೆ.