ಸೋಮವಾರಪೇಟೆ, ಆ. 31: ಸಮೀಪದ ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರ ಸಭೆ ಇಲ್ಲಿನ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ, ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಗೆ ಪಕ್ಷವನ್ನು ಬಲಪಡಿಸುವ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭ ಮಾತನಾಡಿದ ಶಾಸಕರು, ಕೊಡಗಿನಲ್ಲಿ ಬಿಜೆಪಿ ಬೆಳೆದು ಬಂದ ಬಗೆಯನ್ನು ಕಾರ್ಯಕರ್ತರಿಗೆ ವಿವರಿಸಿದರಲ್ಲದೇ, ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗಿದ್ದು, ಮುಂದೆಯೂ ಸಾರ್ವಜನಿಕ ಕೆಲಸಗಳಿಗೆ ಅನುದಾನ ಒದಗಿಸುವದಾಗಿ ಭರವಸೆ ನೀಡಿದರು. ಸಭೆಯಲ್ಲಿದ್ದ ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಮಾತನಾಡಿ, ಕಾರ್ಯಕರ್ತರು ತಮ್ಮೊಳಗಿನ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸ ಬೇಕೆಂದು ಕಿವಿಮಾತು ಹೇಳಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಮಂಡಲ ಬಿಜೆಪಿ ಅಧ್ಯಕ್ಷ ಮನುಕುಮಾರ್ ರೈ ಮಾತನಾಡಿ, ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲು ಕಾರ್ಯಕರ್ತರು ಶ್ರಮವಹಿಸ ಬೇಕೆಂದರು. ಸಭೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಕೆ. ಮಾದಪ್ಪ, ವಿಎಸ್‍ಎಸ್‍ಎನ್ ನಿರ್ದೇಶಕ ಹುಲ್ಲೂರಿಕೊಪ್ಪ ಚಂದ್ರ, ಜಿ. ಪಂ. ಮಾಜಿ ಅಧ್ಯಕ್ಷ ಶಿವಪ್ಪ, ಮಾಜೀ ಸದಸ್ಯ ವೆಂಕಪ್ಪ, ಪ್ರಮುಖರಾದ ಪ್ರಶಾಂತ್ ಗಣೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.