ಕುಶಾಲನಗರ, ಸೆ. 1: ಕುಶಾಲನಗರದಲ್ಲಿ ನಡೆಯುತ್ತಿದ್ದ ವಾರದ ಸಂತೆಯನ್ನು ಮುಂದಿನ ವಾರದಿಂದ ಕುಶಾಲನಗರ ಕೃಷಿ ಉತ್ಪನ್ನ ಮಾರುಕಟ್ಟೆ ಕೇಂದ್ರದ ಆವರಣದಲ್ಲಿ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಡಿಕೇರಿ ಕ್ಷೇತ್ರ ಶಾಸಕ ಅಪ್ಪಚ್ಚುರಂಜನ್ ತಿಳಿಸಿದ್ದಾರೆ. ಅವರು ಕುಶಾಲನಗರ ದಲ್ಲಿ ಪಕ್ಷದ ಜನಪ್ರತಿನಿಧಿಗಳು, ಮುಖಂಡರುಗಳೊಂದಿಗೆ ಸಭೆ ನಡೆಸಿದ ನಂತರ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ನಿರ್ಣಯ ಕೈಗೊಂಡಿದ್ದಾರೆ.

ಮಾಂಸ ಮತ್ತು ಮೀನು ಮಾರುಕಟ್ಟೆಯನ್ನು ಹೊರತುಪಡಿಸಿ ಉಳಿದ ಎಲ್ಲಾ ವ್ಯಾಪಾರ ವಹಿವಾಟು ಮುಂದಿನ ಮಂಗಳವಾರದಿಂದ ಆರಂಭಗೊಳ್ಳಲಿದೆ. ಇದರೊಂದಿಗೆ ಕುಶಾಲನಗರ ಪಟ್ಟಣದಲ್ಲಿ ನೆನೆಗುದಿಗೆ ಬಿದ್ದಿರುವ ಕಾವೇರಿ ಕಲಾಭವನ ಅಕ್ಟೋಬರ್ ತಿಂಗಳಲ್ಲಿ ಲೋಕಾರ್ಪಣೆ ಗೊಳ್ಳಲಿದೆ. ಪಟ್ಟಣ ಪಂಚಾಯ್ತಿಯ ವಾಣಿಜ್ಯ ಸಂಕೀರ್ಣ ಕಟ್ಟಡದ ಬಾಡಿಗೆ ದಾರರ ಗೊಂದಲ ನಿವಾರಿಸಲು ಸಭೆ ಕರೆಯುವುದು, ಕಳೆದ ಹಲವು ವರ್ಷಗಳಿಂದ ಸ್ಥಗಿತಗೊಂಡಿರುವ ಯುಜಿಡಿ ಮತ್ತು ಖಾಸಗಿ ಬಸ್ ನಿಲ್ದಾಣ ಕಾಮಗಾರಿ ಪ್ರಾರಂಭಿ ಸುವುದು, ತಾವರೆಕೆರೆ ಸೇರಿದಂತೆ ಪಟ್ಟಣ ವ್ಯಾಪ್ತಿಯ ಕೆರೆಗಳ ಅಭಿವೃದ್ಧಿಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುದಾನ ಕೋರುವುದು, ಕುಶಾಲನಗರದಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಡಿಪೋ ಮತ್ತು ವಿಭಾಗ ನಿಯಂತ್ರಣ ಅಧಿಕಾರಿಗಳ ಕಚೇರಿ ನಿರ್ಮಾಣಕ್ಕೆ ಯೋಜನೆ ಬಗ್ಗೆ ಪ್ರಮುಖರೊಂದಿಗೆ ಚರ್ಚಿಸಲಾಯಿತು.

ಕುಶಾಲನಗರ ನೂತನ ತಾಲೂಕಿನ ವಿಚಾರವಾಗಿ ಬಹುತೇಕ ಅಂತಿಮ ಹಂತದಲ್ಲಿದ್ದು ಶೀಘ್ರದಲ್ಲಿಯೇ ಸರಕಾರದಿಂದ ಆದೇಶ ಹೊರಬೀಳಲಿದೆ. ಈ ಬಗ್ಗೆ ಯಾವುದೇ ರೀತಿಯ ಗೊಂದಲದ ಅವಶ್ಯಕತೆಯಿಲ್ಲ ಎಂದು ತಿಳಿಸಿರುವ ಶಾಸಕ ಅಪ್ಪಚ್ಚುರಂಜನ್, ಕುಶಾಲನಗರದ ಸರಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಈಗಾಗಲೆ ಸರಕಾರಕ್ಕೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಶಾಸಕರು ಆರ್‍ಎಂಸಿ ಯಾರ್ಡ್ ಮತ್ತಿತರ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.