ಸೋಮವಾರಪೇಟೆ, ಸೆ. 2: ಭಾರತೀಯ ಜನತಾ ಪಾರ್ಟಿಯ ಸೋಮವಾರಪೇಟೆ ಮಂಡಲ ಸಮಿತಿ ವತಿಯಿಂದ ಸ್ಥಳೀಯ ಕೊಡವ ಸಮಾಜದಲ್ಲಿ ಪಕ್ಷದ ಪದಾಧಿಕಾರಿಗಳ ಸಂಘಟನಾತ್ಮಕ ಸಭೆ ನಡೆಯಿತು.

ಮಂಡಲ ಬಿಜೆಪಿ ಅಧ್ಯಕ್ಷ ಮನು ಕುಮಾರ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಮುಂದಿನ ದಿನಗಳಲ್ಲಿ ಎದುರಾಗುವ ಗ್ರಾಮ ಪಂಚಾಯಿತಿ ಚುನಾವಣೆಗೆ ಪಕ್ಷವನ್ನು ತಯಾರಿಗೊಳಿಸುವ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿದ್ದ ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ ಮಾತನಾಡಿ, ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಮೂಲಕ, ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸುವಂತಾಗಬೇಕು ಎಂದರು.

ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ಅಪ್ಪಚ್ಚುರಂಜನ್, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ಮಾಜೀ ಅಧ್ಯಕ್ಷ ಭಾರತೀಶ್ ಸೇರಿದಂತೆ ಇತರರು ಪಕ್ಷವನ್ನು ಬಲಪಡಿಸುವ ಬಗ್ಗೆ ಮಾತನಾಡಿದರು.

ತಾಲೂಕು ಬಿಜೆಪಿ ಮಾಜೀ ಅಧ್ಯಕ್ಷ ಕೊಮಾರಪ್ಪ, ಸಹ ಪ್ರಭಾರಿಗಳಾದ ಗೋಪಾಲ್ ಕೃಷ್ಣ ಹೇರಳೆ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹೆಚ್.ಕೆ. ಮಾದಪ್ಪ, ಜಿಲ್ಲಾ ಉಪಾಧ್ಯಕ್ಷರುಗಳಾದ ಲೋಕೇಶ್ ಕುಮಾರ್, ಭರತ್‍ಕುಮಾರ್, ಉಷಾ ತೇಜಸ್ವಿ, ರಾಜ್ಯ ಎಸ್.ಟಿ. ಮೋರ್ಚಾ ಕಾರ್ಯದರ್ಶಿ ಮಂಜುಳ, ಮಂಡಲ ಪ್ರಧಾನ ಕಾರ್ಯದರ್ಶಿ ಎಂ.ಡಿ. ಕೃಷ್ಣಪ್ಪ, ಮೋಕ್ಷಿತ್, ಗೌತಮ್ ಮತ್ತು ಪಕ್ಷದ ಮುಖಂಡರುಗಳು ಭಾಗವಹಿಸಿದ್ದರು.