ಮಡಿಕೇರಿ, ಸೆ.6 : ಕೊಡಗು ಜಿಲ್ಲಾ ಜಾತ್ಯತೀತ ಜನತಾ ದಳದ ಪ್ರಮುಖರು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕಚೇರಿಗೆ ಭೇಟಿ ನೀಡಿ ಅಲ್ಪಸಂಖ್ಯಾತ ಫಲಾನುಭವಿಗಳು ಸಲ್ಲಿಸಿರುವ ವಿವಿಧ ಯೋಜನೆಗಳ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವಂತೆ ಒತ್ತಾಯಿಸಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮೂಲಕ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಘೋಷಿಸಲಾಗಿದೆ. ಆದರೆ ಈ ಯೋಜನೆಗಳು ಯೋಜನೆಗಳಾಗಿಯೇ ಉಳಿದು ಕೊಂಡಿದ್ದು, ಫಲಾನುಭವಿಗಳು ಸಲ್ಲಿಸಿರುವ ಅರ್ಜಿಗಳು ವಿಲೇವಾರಿ ಯಾಗುತ್ತಿಲ್ಲ ಎಂದು ಆರೋಪಿಸಿದರು.

ದೂರದ ಊರುಗಳಿಂದ ಫಲಾನುಭವಿಗಳು ನಿಗಮದ ಕಚೇರಿಗೆ ಆಗಮಿಸಿ ಅಧಿಕಾರಿಗಳ ಗೈರು ಹಾಜರಿ ಯಿಂದ ಬೇಸತ್ತು ವಾಪಾಸ್ಸಾಗುತ್ತಿದ್ದಾರೆ. ಆರ್ಥಿಕ ಹಿನ್ನಡೆಯ ನಡುವೆ ಪ್ರತಿದಿನ ಕಚೇರಿಗೆ ಅಲೆದಾಡಬೇಕಾದ ದುಸ್ಥಿತಿ ಬಡವರ್ಗಕ್ಕೆ ಬಂದೊದಗಿದೆ. ಜಿಲ್ಲಾಧಿಕಾರಿಗಳು ಅಧಿಕಾರಿಗಳ ಮೇಲಿನ ಹಿಡಿತ ಕಳೆದುಕೊಂಡಿದ್ದಾರೆ ಎಂದು ಗಣೇಶ ಆರೋಪಿಸಿದರು.

ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್ ಮಾತನಾಡಿ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಜನಸಾಮಾನ್ಯರ ಕಣ್ಣೊರೆಸುವ ತಂತ್ರವಾಗಿದೆ ಎಂದು ಟೀಕಿಸಿದರು. ಅಲ್ಪಸಂಖ್ಯಾತರ ನಿಗಮದ ಅಧ್ಯಕ್ಷರಿಗೆ ಸರ್ಕಾರದ ಅನುದಾನವನ್ನು ಫಲಾನುಭವಿಗಳಿಗೆ ಸಮರ್ಪಕವಾಗಿ ನೀಡಲು ಸಾಧ್ಯವಾಗದೇ ಇದ್ದಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದರು.

ಮಡಿಕೇರಿ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಬಷೀರ್, ಜಿಲ್ಲಾ ಕಾರ್ಯದರ್ಶಿ ಎನ್.ಸಿ.ಸುನೀಲ್, ನಗರ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಖಲೀಲ್ ಬಾದ್ ಶಾ, ನಗರ ಎಸ್.ಸಿ ಘಟಕ ಅಧ್ಯಕ್ಷ ರವಿಕುಮಾರ್, ನಗರ ಯುವ ಘಟಕ ಪ್ರಧಾನ ಕಾರ್ಯದರ್ಶಿ ಉಮೇಶ್ ಮತ್ತಿತರರು ಈ ಸಂದರ್ಭ ಹಾಜರಿದ್ದರು.