ಮಡಿಕೇರಿ, ಸೆ. 10: ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮವನ್ನು ಸೂಕ್ತ ರೀತಿಯಲ್ಲಿ ಅನುಷ್ಠಾನಗೊಳಿಸಿ ಉತ್ತಮ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ ಮತ್ತು ಲಸಿಕಾ ಕಾರ್ಯಪಡೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆಶಾ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಶಿಕ್ಷಕರು ಈ ಬಾರಿ ಮನೆಗಳಿಗೆ ತೆರಳಿ 1 ರಿಂದ 19 ವರ್ಷದೊಳಗಿನ ಮಕ್ಕಳಿಗೆ ಜಂತುಹುಳು ಮಾತ್ರೆಗಳನ್ನು ಪೋಷಕರ ಸಮ್ಮುಖದಲ್ಲಿ ನೀಡಿ ಮಕ್ಕಳು ಮಾತ್ರೆಯನ್ನು ಸೇವಿಸುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಈ ಸಂದರ್ಭ ಮಾತನಾಡಿದ ಆರ್ಸಿಎಚ್ ಅಧಿಕಾರಿ ಡಾ. ಗೋಪಿನಾಥ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಆನಂದ್, ಜಿಲ್ಲಾ ಪಂಚಾಯಿತಿ ಸದಸ್ಯರು ಹಾಗೂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಅಪ್ಪಂಡೇರಂಡ ಭವ್ಯ ಆರೋಗ್ಯ ಇಲಾಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಕಾರ್ಯಪ್ಪ, ಸಮುದಾಯ ಆರೋಗ್ಯ ವಿಭಾಗದ ಮುಖ್ಯಸ್ಥ ಡಾ. ರಾಮಚಂದ್ರ ಕಾಮತ್, ಸಹ ಪ್ರಾಧ್ಯಾಪಕ ಡಾ. ಎಸ್.ಹೆಚ್. ಮಹೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅರುಂಧತಿ, ಮಕ್ಕಳ ತಜ್ಞರಾದ ಡಾ. ಕೃಷ್ಣಾನಂದ, ಡಾ. ಸೋಮಶೇಖರ್, ತಾಲೂಕು ವೈದ್ಯಾಧಿಕಾರಿಗಳು, ಶುಶ್ರೂಷಕಿಯರು ಇತರರು ಇದ್ದರು.