ಶನಿವಾರಸಂತೆ, ಸೆ. 12: ಮೂದ್ರವಳ್ಳಿ ಭೈರಾಚಾರ್ಯ ದೇವಮ್ಮ ಸ್ಮಾರಕ ದತ್ತಿನಿಧಿ ಮತ್ತು ಲಯನ್ಸ್ ಕ್ಲಬ್ ಸಹಭಾಗಿತ್ವದಲ್ಲಿ ಅಕ್ಟೋಬರ್ 2 ರಂದು ಬೆಳಿಗ್ಗೆ 10.30 ಗಂಟೆಗೆ ಗಾಂಧಿ ಜಯಂತಿ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಭಾರತಿ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮೈಸೂರಿನ ಮಾನವ ಸಂಪನ್ಮೂಲ ಅಭಿವೃದ್ಧಿ ತರಬೇತುದಾರ ಹಾಗೂ ಸಾಹಿತಿ ಬಿ.ಬಿ. ಶಿವಣ್ಣ ಹೇಳಿದರು.
ಭಾರತಿ ವಿದ್ಯಾಸಂಸ್ಥೆಯಲ್ಲಿ ಶನಿವಾರ ಗಾಂಧಿ ಜಯಂತಿ ಕಾರ್ಯಕ್ರಮದ ಪ್ರಯುಕ್ತ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಶನಿವಾರಸಂತೆ ಹೋಬಳಿ ವ್ಯಾಪ್ತಿಯ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನಲ್ಲಿ ಅಧ್ಯಯನ ಮಾಡಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ನಿವೃತ್ತ ಸೈನಿಕರ ಸಂಘದಲ್ಲಿ ಇರುವವರಲ್ಲಿ ಅತಿ ಹೆಚ್ಚು ವರ್ಷ ಸೇವೆ ಸಲ್ಲಿಸಿ ಸೈನ್ಯದಲ್ಲಿ ಉತ್ತನ ಹುದ್ದೆಯಲ್ಲಿದ್ದು ನಿವೃತ್ತರಾದ ಹಾಗೂ ಹಿರಿಯ ಸದಸ್ಯರಿಗೆ ಸನ್ಮಾನ ಹಾಗೂ ಸ್ಮಾರಕ ದತ್ತಿನಿಧಿಯಿಂದ ಉತ್ತೇಜನ ಪಡೆದು ಸಮಾಜದಲ್ಲಿ ಸಾಧನೆ ಮಾಡಿರುವ ಕೆಲವರನ್ನು ಸನ್ಮಾನಿಸಲಾಗುವುದು ಎಂದು ಅವರು ತಿಳಿಸಿದರು.
ಸಭಾ ಕಾರ್ಯಕ್ರಮವನ್ನು ಸಮಾಜ ಸೇವಕ ಹಾಗೂ ರಾಜಕೀಯ ಮುತ್ಸದ್ಧಿ ಬಿ.ಕೆ. ಚಿಣ್ಣಪ್ಪ ಉದ್ಘಾಟಿಸಲಿದ್ದಾರೆ. ವಿದ್ಯಾಸಂಸ್ಥೆ ಅಧ್ಯಕ್ಷ ಎನ್.ಬಿ. ನಾಗಪ್ಪ ಅಧ್ಯಕ್ಷತೆ ವಹಿಸುತ್ತಾರೆ. ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್ ಅಧ್ಯಕ್ಷ ಹೆಚ್.ಸಿ. ಧರ್ಮಪ್ಪ, ಉಪನ್ಯಾಸಕರಾಗಿ ಶಿಕ್ಷಕ ಕೆ.ಪಿ. ಜಯಕುಮಾರ್ ಹಾಗೂ ಪ್ರೆಸ್ಕ್ಲಬ್ ಅಧ್ಯಕ್ಷ ಹೆಚ್.ಆರ್. ಹರೀಶ್ಕುಮಾರ್ ಪಾಲ್ಗೊಳ್ಳಲಿದ್ದಾರೆ ಎಂದು ಶಿವಣ್ಣ ತಿಳಿಸಿದರು.
ಲಯನ್ಸ್ ಕ್ಲಬ್ ಖಜಾಂಚಿ ಬಿ.ಕೆ. ಚಿಣ್ಣಪ್ಪ ಮಾತನಾಡಿ, ಸೇವಾ ಸಂಸ್ಥೆಯಾದ ಲಯನ್ಸ್ ಕ್ಲಬ್ 2 ವರ್ಷಗಳಿಂದ ಜನಪರ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ. ಮೂದ್ರವಳ್ಳಿ ಭೈರಾಚಾರ್ಯ ದೇವಮ್ಮ ಸ್ಮಾರಕ ದತ್ತಿನಿಧಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವುದರಿಂದ ಗಾಂಧಿ ಜಯಂತಿ ಕಾರ್ಯಕ್ರಮಕ್ಕೆ ಸಹಕಾರ ನೀಡುತ್ತಿದೆ ಎಂದರು.
ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಎನ್.ಬಿ. ನಾಗಪ್ಪ, ಸದಸ್ಯ ಎಸ್.ಜಿ. ನರೇಶ್ಚಂದ್ರ, ದತ್ತಿನಿಧಿ ಪ್ರತಿನಿಧಿಗಳಾದ ವೆಂಕಟೇಶ್, ಬಾಬು, ಕುಮಾರ್ ಉಪಸ್ಥಿತರಿದ್ದರು.