ಮಡಿಕೇರಿ, ಸೆ. 21 : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ ತಾ. 24 ರಂದು ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಸಂಘದ ಅಧ್ಯಕ್ಷ ಎಂ.ಮಹದೇವಪ್ಪ, ಆರೋಗ್ಯ ಇಲಾಖೆಯ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಆದ ವೈದ್ಯಕೀಯ, ಅರೆವೈದ್ಯಕೀಯ ಮತ್ತು ಕಚೇರಿ ಸಿಬ್ಬಂದಿಗಳ ಹಲವಾರು ವರ್ಷಗಳ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ವಹಿಸದೇ ಇರುವುದು ಖಂಡನೀಯ ಎಂದರು.
ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ ತಾ. 24 ರಂದು ಆರೋಗ್ಯ ಇಲಾಖೆಯ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿರುವುದಾಗಿ ಹೇಳಿದರು. ರಾಜ್ಯ ಸರ್ಕಾರದ ಆರೋಗ್ಯ ಕ್ಷೇತ್ರದ ಬಜೆಟ್ ಶೇಕಡಾವಾರು ಹೆಚ್ಚಿಸಬೇಕು ಮತ್ತು ಈ ಕ್ಷೇತ್ರಕ್ಕೆ ಪ್ರಾಮುಖ್ಯತೆ ನೀಡಿ, ಅದಕ್ಕೆ ಅಗತ್ಯವಿರುವ ಆರ್ಥಿಕ ನೆರವನ್ನು ಕೇಂದ್ರ ಸರ್ಕಾರ ನೀಡಬೇಕು, ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಕ್ಷೇಮಾಭಿವೃದ್ಧಿಗೆ ಆದ್ಯತೆ ನೀಡಲು ಕ್ರಮ ವಹಿಸಬೇಕು. ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸುವುದಾಗಿ ತಿಳಿಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ರಘು, ಖಜಾಂಚಿ ದಿವಾಕರ್ ಮತ್ತಿತರರು ಮನವಿ ಪತ್ರ ನೀಡುವ ಸಂದರ್ಭ ಹಾಜರಿದ್ದರು.