ಶನಿವಾರಸಂತೆ, ಸೆ. 23: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಕಾಂತಪುರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪೋಷಣ್ ಅಭಿಯಾನ ಯೋಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕೆ.ಆರ್. ಚಂದ್ರಶೇಖರ್ ಮಾತನಾಡಿ, ಪ್ರತಿಯೊಬ್ಬರು ಉತ್ತಮ ಆರೋಗ್ಯಕ್ಕಾಗಿ ಗುಣಮಟ್ಟದ ಆಹಾರ ಸೇವಿಸಬೇಕು ಎಂಬ ಉದ್ದೇಶದಿಂದ ಸರ್ಕಾರ ಪೋಷಣ್ ಅಭಿಯಾನ ಯೋಜನಾ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು, ಇದರ ಸದುಪಯೋಗವಾಗಬೇಕು ಎಂದರು.

ಅಂಗನವಾಡಿ ಶಿಕ್ಷಕಿ ಎ.ಎನ್. ಪಂಕಜಾ ಮಾತನಾಡಿ, ಎಲ್ಲಾ ಪೋಷಕಾಂಶಗಳನ್ನೊಳಗೊಂಡ ಸಮತೂಕದ ಆಹಾರವನ್ನು ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳು ಸೇವಿಸಬೇಕು ಎಂಬ ಉದ್ದೇಶದಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶನದಂತೆ ಆರೋಗ್ಯ ಇಲಾಖೆಯ ಸಹಕಾರ ಪಡೆದು ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಟಿ.ಎಸ್. ಮಂಜುಳಾ ಮಾತನಾಡಿ, ಗರ್ಭಿಣಿ - ಬಾಣಂತಿಯರು ಪೋಷಕಾಂಶಯುಕ್ತ ಆಹಾರ ಸೇವನೆಯೊಂದಿಗೆ ಕಾಲ ಕಾಲಕ್ಕೆ ಆರೋಗ್ಯ ಇಲಾಖೆ ಮತ್ತು ವೈದ್ಯರು ನೀಡುವ ನಿರ್ದೇಶನಗಳನ್ನು ಪಾಲಿಸಿ ಆರೋಗ್ಯದಲ್ಲಿ ಸಮತೋಲನ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪ್ರಾಥಮಿಕ ಶಾಲಾ ಶಿಕ್ಷಕ ಮಹಮ್ಮದ್ ಫಯಾಜ್, ಗ್ರಾಮ ಪ್ರಮುಖರಾದ ಹಾಲಪ್ಪ, ಪ್ರಸನ್ನ, ಅಂಗನವಾಡಿ ಸಹ ಕಾರ್ಯಕರ್ತೆ ಯರು, ಪೋಷಕರು ಹಾಜರಿದ್ದರು.