ಸಿದ್ದಾಪುರ, ಸೆ. 24: ಕಾಡಾನೆಗಳ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ವತಿಯಿಂದ ಅಳವಡಿಸುತ್ತಿರುವ ರೈಲ್ವೇ ಬ್ಯಾರಿಕೇಡ್ ಕಾಮಗಾರಿಯನ್ನು ಜಿಲ್ಲಾಧಿಕಾರಿಗಳು ಪರಿಶೀಲನೆ ಮಾಡಿದರು. ವಾಲ್ನೂರು ಭಾಗದಲ್ಲಿ ಕಾಡಾನೆಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ರೈಲ್ವೇ ಬ್ಯಾರಿಕೇಡ್ ಅಳವಡಿಸುವ ಕಾಮಗಾರಿ ನಡೆಯುತ್ತಿದ್ದು, ಈ ಕಾಮಗಾರಿಯನ್ನು ಜಿಲ್ಲಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಮಾತನಾಡಿ ವಾಲ್ನೂರು ಭಾಗದಲ್ಲಿ ಕಾಡಾನೆಗಳ ಹಾವಳಿ ತೀವ್ರವಾಗಿದೆ. ಕೃಷಿ ಫಸಲುಗಳನ್ನು ನಾಶಗೊಳಿಸುತ್ತಿವೆ. ಅಲ್ಲದೆ ಕಾಫಿ ತೋಟಗಳಲ್ಲಿ ಬೀಡುಬಿಟ್ಟು ದಾಂಧÀಲೆ ನಡೆಸುತ್ತಿವೆ ಎಂದು ಮಾಹಿತಿ ನೀಡಿದರು. ಈ ಭಾಗದಲ್ಲಿ ಸಮರ್ಪಕವಾಗಿ ರೈಲ್ವೇ ಬ್ಯಾರಿಕೇಡ್ ಅಳವಡಿಸುವಂತೆ ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್, ಎಸಿಎಫ್ ನೆಹರು, ವಲಯ ಅರಣ್ಯಾಧಿಕಾರಿ ಅನನ್ಯ ಕುಮಾರ್, ಉಪವಲಯ ಅರಣ್ಯಾಧಿಕಾರಿ ಸುಬ್ರಾಯ, ಗ್ರಾಮಸ್ಥರಾದ ಮನು, ಮಹೇಶ್, ಮುಂಡರುಮನೆ ಶಿವಕುಮಾರ್, ಸುದೀಶ್, ಗಿರೀಶ್ ಇನ್ನಿತರರು ಹಾಜರಿದ್ದರು.