ಕೂಡಿಗೆ, ಸೆ. 24: ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 2019-20ನೇ ಸಾಲಿನ ಜಮಾಬಂದಿ ಕಾರ್ಯಕ್ರಮ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಆಡಳಿತ ಅಧಿಕಾರಿ ಅಶೋಕ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ 2019-20ನೇ ಸಾಲಿನಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ವಿವಿಧ ಕಾಮಗಾರಿಗಳ ಸಂಪೂರ್ಣವಾದ ವರದಿಯನ್ನು ಮಂಡಿಸಲಾಯಿತು. ಸಭೆಯಲ್ಲಿ ಹಾಜರಿದ್ದ ಗ್ರಾಮಸ್ಥರು ಕಾಮಗಾರಿಗಳ ಲೆಕ್ಕಪತ್ರ ಮತ್ತು ಇತರ ಮಾಹಿತಿಗಳನ್ನು ಪಡೆದರು.
ಸಭೆಯಲ್ಲಿ ಹಾಜರಿದ್ದ ಅಭಿವೃದ್ಧಿ ಅಧಿಕಾರಿ ಹೆಚ್.ಎಸ್. ರಾಜಶೇಖರ ಮಾತನಾಡಿ, ಗ್ರಾಮದ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಗ್ರಾಮಸ್ಥರು ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಲ್ಲಿ ತಮ್ಮನ್ನು ನೋಂದಣಿ ಮಾಡಿಸಿಕೊಂಡು ತಮ್ಮ ಗ್ರಾಮದ ಕೆಲಸಗಳಾದ ಉಪ ರಸ್ತೆ, ತಡೆಗೋಡೆ, ರೈತರ ಕಣ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಂಡು ಪೂರ್ಣಗೊಳಿಸಲು ಮನವಿ ಮಾಡಿದರು.
ಈ ಸಂದರ್ಭ ನೋಡಲ್ ಅಧಿಕಾರಿಯಾಗಿ ಕುಶಾಲನಗರ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅರುಣ, ಅಭಿವೃದ್ಧಿ ಅಧಿಕಾರಿ ರಾಜಶೇಖರ, ಕಾರ್ಯದರ್ಶಿ ಬಲರಾಮೇಗೌಡ ಸೇರಿದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ಭಾಗವಹಿಸಿದ್ದರು.