ಮಡಿಕೇರಿ, ಸೆ. 25: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನವನ್ನು ಕಾಲ ಮಿತಿಯೊಳಗೆ ಬಳಕೆ ಮಾಡಬೇಕು. ಇಲ್ಲದಿದ್ದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಎಚ್ಚರಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಬಗ್ಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ವಿವಿಧ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನವನ್ನು ಬಳಸದಿದ್ದಲ್ಲಿ ಕಠಿಣ ಕ್ರಮ ಎದುರಿಸ ಬೇಕಾಗುತ್ತದೆ. ಈ ಯೋಜನೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.

ಪ್ರಸಕ್ತ ಸಾಲಿನಲ್ಲಿ ಎಸ್ಸಿಪಿ/ಟಿಎಸ್ಪಿ ಯೋಜನೆಯಡಿ ಬಿಡುಗಡೆಯಾದ ಅನುದಾನ ಖರ್ಚುಮಾಡಬೇಕು. ಸಭೆಗೆ ನಿಖರ ಮಾಹಿತಿ ನೀಡಬೇಕು. ತಪ್ಪು ಮಾಹಿತಿ ಒದಗಿಸಿದ್ದಲ್ಲಿ ತಾವೇ ಜವಾಬ್ದಾರರು ಎಂದು ಅವರು ಹೇಳಿದರು.

ಜಿ.ಪಂ. ಸಿಇಒ ಭಂವರ್ ಸಿಂಗ್ ಮೀನಾ ಅವರು ಮಾತನಾಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿಯ ಕಾರ್ಯಕ್ರಮ ಸಮರ್ಪಕವಾಗಿ ಅನುಷ್ಠಾನ ಗೊಳಿಸಬೇಕು ಎಂದು ಅವರು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಭಾರತಿ, ಐಟಿಡಿಪಿ ಇಲಾಖೆ ಅಧಿಕಾರಿ ಸಿ. ಶಿವಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ನಿಂಗರಾಜಪ್ಪ ಅವರು ಹಲವು ಮಾಹಿತಿ ನೀಡಿದರು. ಈ ಸಂದರ್ಭ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದು, ತಮ್ಮ ಇಲಾಖೆ ವ್ಯಾಪ್ತಿಯ ಕಾರ್ಯಕ್ರಮದ ಪ್ರಗತಿ ಬಗ್ಗೆ ಮಾಹಿತಿ ನೀಡಿದರು.