ಸೋಮವಾರಪೇಟೆ, ಸೆ. 27: ಜಾನಪದವೇ ಎಲ್ಲಾ ಸಂಸ್ಕøತಿಯ ಮೂಲನೆಲೆಯಾಗಿದ್ದು, ಇದರ ಉಳಿವು ಎಲ್ಲರ ಜವಾಬ್ದಾರಿಯಾಗಬೇಕೆಂದು ಹೆಬ್ಬಾಲೆ ಪ್ರೌಢಶಾಲೆಯ ಕನ್ನಡ ಶಿಕ್ಷಕ ಮೆ.ನಾ.ವೆಂಕಟನಾಯಕ್ ಅಭಿಪ್ರಾಯಿಸಿದರು.

ಇಲ್ಲಿನ ಚನ್ನಬಸಪ್ಪ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಸೋಮವಾರಪೇಟೆ ತಾಲೂಕು ಘಟಕದ ಆಶ್ರಯದಲ್ಲಿ ಆಯೋಜಿಸಿದ್ದ ಸುಲೋಚನಾ ಡಾ. ನಾಗರಾಜ್ ದಂಪತಿ ದತ್ತಿ ಸಮಾರಂಭ ಹಾಗೂ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ. ಕನ್ನಡ ಭಾಷಾ ವಿಷಯದಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗೌರವ ಪುರಸ್ಕಾರ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಮಾತನಾಡಿ, ಎಲ್ಲಾ ಭಾಷಿಕರು ಒಂದಾಗಿ ಕನ್ನಡದ ಬೆಳವಣಿಗೆಗೆ ಶ್ರಮಿಸುತ್ತಿದ್ದಾರೆ. ಪ್ರತಿ ವರ್ಷ ವಿದ್ಯಾರ್ಥಿಗಳಲ್ಲಿ ಪ್ರೋತ್ಸಾಹವನ್ನು ನೀಡುವ ಉದ್ದೇಶದಿಂದ ಪರಿಷತ್ ವತಿಯಿಂದ ಪ್ರತಿಭಾ ಪುರಸ್ಕಾರವನ್ನು ನೀಡಲಾಗುತ್ತಿದೆ ಎಂದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹೆಚ್.ಜೆ. ಜವರಪ್ಪ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪದವೀಧರ ಮುಖ್ಯ ಶಿಕ್ಷಕಿ ಎಂ.ಜೆ. ಅಣ್ಣಮ್ಮ, ಜಿಲ್ಲಾ ಕ.ಸಾ.ಪ. ಕೋಶಾಧಿಕಾರಿ ಎಸ್.ಎ. ಮುರಳೀಧರ್, ಜಿಲ್ಲಾ ನಿರ್ದೇಶಕರುಗಳಾದ ಕವನ್ ಕಾರ್ಯಪ್ಪ, ಎಸ್.ಪಿ. ಪ್ರಸನ್ನ, ಸುಮಾ ಸುದೀಪ್, ತಾಲೂಕು ಘಟಕದ ನಿಕಟಪೂರ್ವ ಅಧ್ಯಕ್ಷ ಎಸ್.ಡಿ. ವಿಜೇತ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಅತೀ ಹೆಚ್ಚು ಅಂಕ ಪಡೆದ ತಾಲೂಕಿನ ಐಗೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿ ಕೆ.ಆರ್. ಹರ್ಷಿತಾ ಅವರನ್ನು ಸನ್ಮಾನಿಸಲಾಯಿತು. ಎಸ್.ಎಸ್. ಎಲ್.ಸಿ. ಹಾಗೂ ಪಿ.ಯು.ಸಿ. ಯಲ್ಲಿ ಕನ್ನಡ ಭಾಷಾ ವಿಷಯದಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ತಾಲೂಕು ಘಟಕದ ಗೌರವ ಕಾರ್ಯದರ್ಶಿಗಳಾದ ಎಲ್.ಎಂ. ಪ್ರೇಮ ಹಾಗೂ ಡಿ.ಪಿ.ಲೋಕೇಶ್ ಕಾರ್ಯಕ್ರಮ ನಿರ್ವಹಿಸಿದರು.