ಮಡಿಕೇರಿ, ಅ. 4: ಈ ಬಾರಿ ಕಾವೇರಿ ತೀರ್ಥೋದ್ಭವ ಸಂದರ್ಭ; ಕೊರೊನಾ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಂದ ಕಾವೇರಿ ಕ್ಷೇತ್ರಕ್ಕೆ ಬರುವ ಭಕ್ತಾದಿಗಳು ಕೊರೊನಾ ಪರೀಕ್ಷಾ ವರದಿಯೊಂದಿಗೆ ಬರುವಂತಾಗಬೇಕು ಎಂದು ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ತಿಳಿಸಿದ್ದಾರೆ. ‘ಶಕ್ತಿ’ಯೊಂದಿಗೆ ಮಾತನಾಡಿದ ಅವರು ಹೊರ ರಾಜ್ಯಗಳಲ್ಲಿ ಕೊರೊನಾ ವೈರಸ್ ಹಾವಳಿ ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ಹೊರರಾಜ್ಯಗಳಿಂದ ಕಾವೇರಿ ಕ್ಷೇತ್ರಕ್ಕೆ ಬರುವವರು ಕಡ್ಡಾಯವಾಗಿ ಕೊರೊನಾ ಪರೀಕ್ಷಾ ವರದಿಯೊಂದಿಗೆ ಬರಬೇಕು. ಈ ಬಗ್ಗೆ ತಾನು ಜಿಲ್ಲಾ ಉಸ್ತುವಾರಿ ಸಚಿವರ ಗಮನ ಸೆಳೆದಿದ್ದು, ಕಾರ್ಯರೂಪಕ್ಕೆ ಬರಲಿದೆ ಎಂದು ಬೋಪಯ್ಯ ಹೇಳಿದ್ದಾರೆ.ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಬರುವವರು ಮಾಸ್ಕ್ ನೊಂದಿಗೆ ಸಾಮಾಜಿಕ ಅಂತರ ನಿಯಮಗಳನ್ನು ಪಾಲಿಸುವಂತಾಗಬೇಕು. ಕ್ಷೇತ್ರದಲ್ಲಿ ಥರ್ಮಲ್ ಸ್ಕ್ಯಾನಿಂಗ್ ಹಾಗೂ ಸ್ಯಾನಿಟೈಸಿಂಗ್ ವ್ಯವಸ್ಥೆಯನ್ನು ಮಾಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ತಮ್ಮಯ್ಯ ಪ್ರತಿಕ್ರಿಯೆ

ಕಾವೇರಿ ತೀರ್ಥೋದ್ಭವ ಸಂದರ್ಭ ಕೊರೊನಾ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಕಡ್ಡಾಯವಾಗಿ ಮಾಸ್ಕ್ ಧರಿಸುವ ಮೂಲಕ ಸಾಮಾಜಿಕ ಅಂತರ ಕಾಯ್ದುಕೊಂಡು ಭಕ್ತರು ಕಾವೇರಿ ಕ್ಷೇತ್ರಕ್ಕೆ ಆಗಮಿಸಬಹುದು ಎಂದು ತಲಕಾವೇರಿ - ಭಾಗಮಂಡಲ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಎಸ್. ತಮ್ಮಯ್ಯ ‘ಶಕ್ತಿ’ಗೆ ತಿಳಿಸಿದ್ದಾರೆ. ಕೊರೊನಾ ವೈರಸ್ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಂದ ಬರುವ ಭಕ್ತರುಗಳಿಗೆ ಷರತ್ತುಗಳನ್ನು ವಿಧಿಸುವ ಬಗ್ಗೆ ಸರ್ಕಾರ ಹಾಗೂ ಜಿಲ್ಲಾಡಳಿತ ತೀರ್ಮಾನ ಕೈಗೊಳ್ಳಬೇಕಿದೆ ಎಂದು ಅವರು ಹೇಳಿದ್ದಾರೆ.