ಮಡಿಕೇರಿ, ಅ.6 : ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದಿರುವ ದಲಿತ ಯುವತಿಯ ಮೇಲಿನ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಬಿಜೆಪಿಯ ದಲಿತ ಶಾಸಕರು, ಸಂಸದರು ಹಾಗೂ ಸಚಿವರುಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕ ಒತ್ತಾಯಿಸಿದೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ದಲಿತ ಯುವತಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಅಮಾನವೀಯ ಘಟನೆಯನ್ನು ಖಂಡಿಸಲಾಗದ ಪರಿಸ್ಥಿತಿಯಲ್ಲಿ ಬಿಜೆಪಿಯಲ್ಲಿರುವ ದಲಿತ ಮುಖಂಡರುಗಳು ಸಿಲುಕಿಕೊಂಡಿದ್ದಾರೆ ಎಂದು ಆರೋಪಿಸಿದರು.

ಸಂವಿಧಾನದಡಿಯಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿಯ ದಲಿತ ಸಚಿವರು, ಸಂಸದರು ಹಾಗೂ ಶಾಸಕರು ತಮ್ಮ ತಮ್ಮ ಸ್ವಾರ್ಥಕ್ಕಾಗಿ ಮೌನಕ್ಕೆ ಶರಣಾಗಿ ಅಧಿಕಾರವನ್ನು ಭದ್ರಗೊಳಿಸಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.