ಮಡಿಕೇರಿ, ಅ. 6: ಲಾಕ್ಡೌನ್ ಸಂದರ್ಭದಲ್ಲಿ ಹಸಿರು ವಲಯದಲ್ಲಿ ಇದ್ದ ಕೊಡಗು ಜಿಲ್ಲೆಯಲ್ಲಿ ಅನ್ಲಾಕ್ ಸಂದರ್ಭದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೋವಿಡ್ ನಿಯಂತ್ರಣ ಮಾಡಲು ಕೋವಿಡ್ ಪರೀಕ್ಷೆ ಹೆಚ್ಚಿಸಬೇಕು. ಜೊತೆಗೆ ಜಾಗೃತಿ ಮೂಡಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಕೊಡಗು ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆ ಸಂಬಂಧಿಸಿದ ಸಭೆಯಲ್ಲಿ ಅವರು ಮಾತನಾಡಿದರು. ಕೋವಿಡ್ ಪರೀಕ್ಷೆ ಹೆಚ್ಚಿಸುವುದು, ಕೋವಿಡ್ ಬಗ್ಗೆ ಅರಿವು ಮೂಡಿಸುವುದು, ಗಣ್ಯರಿಂದ ಸಂದೇಶ ನೀಡುವುದು, (ಮೊದಲ ಪುಟದಿಂದ) ಹೀಗೆ ಹಲವು ರೀತಿಯ ಕ್ರಮಗಳನ್ನು ಕೈಗೊಂಡು ಕೋವಿಡ್ ನಿಯಂತ್ರಣ ಮಾಡಬೇಕಿದೆ. ಕೋವಿಡ್ ನಿಯಂತ್ರಿಸುವಲ್ಲಿ ಮತ್ತು ಪ್ರಕೃತಿ ವಿಕೋಪ ಎದುರಿಸುವಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಡಳಿತ ಸಮರ್ಪಕವಾಗಿ ನಿರ್ವಹಣೆ ಮಾಡಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಶೇ.67 ರಷ್ಟು ಕೋವಿಡ್ ಪರೀಕ್ಷೆ ಮಾಡಲಾಗಿದೆ. ಇನ್ನಷ್ಟು ಕೋವಿಡ್ ಪರೀಕ್ಷೆ ಮಾಡಬೇಕು. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣ ಹೆಚ್ಚಳವಾಗುತ್ತಿರುವುದು ಆತಂಕದ ವಿಚಾರ.
ಕೋವಿಡ್ ಪರೀಕ್ಷೆಯ ವರದಿಯನ್ನು ಕಾಲ ಮಿತಿಯೊಳಗೆ ಒದಗಿಸುವ ನಿಟ್ಟಿನಲ್ಲಿ ವೈದ್ಯರು ಮೂರು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂದರು.
ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಮಾತನಾಡಿ ತಾಲೂಕು ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ ಇದ್ದು, ತಜ್ಞ ವೈದ್ಯರನ್ನು ನಿಯೋಜಿಸಬೇಕು ಎಂದು ಮನವಿ ಮಾಡಿದರು.
ದಸರಾ ಹಾಗೂ ತುಲಾ ಸಂಕ್ರಮಣ ಜಾತ್ರೆ ಸಂದರ್ಭದಲ್ಲಿ ಜನದಟ್ಟಣೆ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸಬೇಕಿದೆ. ಆ ನಿಟ್ಟಿನಲ್ಲಿ 144 ಸೆಕ್ಷನ್ ಜಾರಿ ಮಾಡಬೇಕು ಎಂದು ಕೋರಿದರು.
ಮಡಿಕೇರಿ, ಸೋಮವಾರಪೇಟೆ, ಕುಶಾಲನಗರ ಹಾಗೂ ಗೋಣಿಕೊಪ್ಪ ಸಂತೆ ಸ್ಥಳವನ್ನು ಆರ್ಎಂಸಿಗೆ ಸ್ಥಳಾಂತರಿಸಬೇಕು ಎಂದು ಶಾಸಕರಾದ ಕೆ.ಜಿ.ಬೋಪಯ್ಯ ಹಾಗೂ ಅಪ್ಪಚ್ಚುರಂಜನ್ ಸಲಹೆ ನೀಡಿದರು.
ವಿವಿಧ ಮಾಧ್ಯಮಗಳ ಮೂಲಕ ಕೋವಿಡ್ ನಿಯಂತ್ರಣ ಸಂಬಂಧ ಸಂದೇಶ ಭಿತ್ತರಿಸಬೇಕು. ಸರ್ಕಾರ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರನ್ನು ಖಾಯಂ ಮಾಡಲು ಮುಂದಾಗಿದೆ ಎಂದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಕೋವಿಡ್ ಸಂಬಂಧಿಸಿದಂತೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿ ಜಿಲ್ಲೆಯಲ್ಲಿ ಇದುವರೆಗೆ 3,163 ಪ್ರಕರಣಗಳು ವರದಿಯಾಗಿದ್ದು, ಇದುವರೆಗೆ 2,600 ಮಂದಿ ಬಿಡುಗಡೆಯಾಗಿದ್ದಾರೆ. 514 ಸಕ್ರಿಯ ಪ್ರಕರಗಳು ಇದ್ದು, ಇದುವರೆಗೆ 45,684 ಮಾದರಿ ಪರೀಕ್ಷೆ ಮಾಡಲಾಗಿದೆ. 475 ನಿಯಂತ್ರಿತ ಪ್ರದೇಶಗಳಿವೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಪ್ರತೀ ದಿನ ಕೋವಿಡ್ ಪರೀಕ್ಷೆ ಗುರಿ ಹೆಚ್ಚಿಸಲಾಗಿದ್ದು, 500 ಆರ್ಟಿಪಿಸಿಆರ್ ಮತ್ತು 300 ಆರ್ಎಟಿ ಸೇರಿ ಒಟ್ಟು 800 ಮಂದಿ ಪರೀಕ್ಷೆ ಮಾಡಲಾಗುತ್ತಿದೆ. ಕೋವಿಡ್ ಪರೀಕ್ಷೆ ನಡೆಸಲು ಒಟ್ಟು 9 ಸಂಚಾರಿ ತಂಡಗಳನ್ನು ರಚಿಸಲಾಗಿದೆ. ಹಾಟ್ಸ್ಪಾಟ್ ಪ್ರದೇಶಗಳ ಮನೆಗಳಿಗೆ ತೆರಳಿ ಪಲ್ಸ್ ಆಕ್ಸಿಮೀಟರ್ (Puಟse ಔximeಣeಡಿ) ಸಮೀಕ್ಷೆ ಮಾಡಲಾಗುತ್ತಿದೆ. ಗ್ರಾಮ ಮಟ್ಟದಲ್ಲಿ ಹಾಗೂ ವಾರ್ಡ್ ಮಟ್ಟದಲ್ಲಿ ಆರೋಗ್ಯ ತಪಾಸಣಾ ತಂಡಕ್ಕೆ ಸಹಕರಿಸುವ ನಿಟ್ಟಿನಲ್ಲಿ ಟಾಸ್ಕ್ಪೋರ್ಸ್ ರಚಿಸಲಾಗಿದೆ. ಆರೋಗ್ಯ ತಪಾಸಣಾ ತಂಡಕ್ಕೆ ಹೆಚ್ಚುವರಿಯಾಗಿ ಆಂಬುಲೆನ್ಸ್ ಹಾಗೂ ಬಾಡಿಗೆ ಆಧಾರದಲ್ಲಿ ವಾಹನ ಒದಗಿಸಲು ಕ್ರಮವಹಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ 100 ಹಾಸಿಗೆಯ ಕೋವಿಡ್ ಆಸ್ಪತ್ರೆ ಮತ್ತು 150 ಹಾಸಿಗೆ ಸಾಮಥ್ರ್ಯದ ಡಿಸಿಎಚ್ಸಿಗಳಿದ್ದು, ಈ ಪೈಕಿ 150 ಹಾಸಿಗೆಗಳಿಗೆ ಆಮ್ಲಜನಕ ಸರಬರಾಜು ವ್ಯವಸ್ಥೆ ಇದೆ. ಜಿಲ್ಲೆಯಲ್ಲಿ ಸುಸಜ್ಜಿತವಾದ 56 ಬೆಡ್ಗಳ ತೀವ್ರ ನಿಗಾ ಘಟಕ ಕಾರ್ಯನಿರ್ವಹಿಸುತ್ತಿದೆ. ಮಕ್ಕಳ ಮತ್ತು ನವಜಾತ ಶಿಶುಗಳಿಗೆ ವಿಶೇಷ ಸೌಲಭ್ಯವಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಕಾರ್ಯಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ವೈದ್ಯಕೀಯ ಕಾಲೇಜಿನ ಆಡಳಿತಾಧಿಕಾರಿ ಡಾ.ನಂಜುಂಡೇಗೌಡ, ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧೀಕ್ಷಕರಾದ ಡಾ. ಲೋಕೇಶ್, ಮೆಡಿಕಲ್ ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಎಂ.ಎ. ನಿರಂಜನ್ ಇತರರು ಇದ್ದರು.
ಸ್ವಾಗತ ಸಂದರ್ಭದಲ್ಲಿ ಕೊಡಗಿನ ಸಂಪ್ರದಾಯಿಕ ಒಡಿಕತ್ತಿ ನೀಡಿ ಸಚಿವರನ್ನು ಗೌರವಿಸಲಾಯಿತು.