ಮಡಿಕೇರಿ, ಅ. 9: ಉತ್ತರ ಪ್ರದೇಶದ ಹಥಾರಸ್ನಲ್ಲಿ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಘಟಕ ನಗರದಲ್ಲಿ ಪ್ರತಿಭಟನೆ ನಡೆಸಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಮಿತಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ಸಮಿತಿಯ ಜಿಲ್ಲಾಧ್ಯಕ್ಷ ಹೆಚ್.ಎಲ್. ದಿವಾಕರ್, ವಿಭಾಗೀಯ ಸಂಚಾಲಕ ಎನ್. ವೀರಭದ್ರಯ್ಯ, ಮಡಿಕೇರಿ ತಾಲೂಕು ಸಂಚಾಲಕ ಎ.ಪಿ. ದೀಪಕ್, ಜಿಲ್ಲಾ ಸಂಘಟನಾ ಸಂಚಾಲಕ ಹೆಚ್.ಎಲ್. ಕುಮಾರ್, ಈರಪ್ಪ, ಶನಿವಾರಸಂತೆ ಹೋಬಳಿ ಸಂಚಾಲಕ ಲೋಕೇಶ್, ಮೂರ್ನಾಡು ಹೋಬಳಿ ಸಂಚಾಲಕ ರಘು ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು.