ಮಡಿಕೇರಿ ಅ.9 : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರದಲ್ಲಿ ಮೂಲ ಬಿಜೆಪಿಗರು ಹಾಗೂ ವಲಸಿಗರ ನಡುವೆ ಸಂಘರ್ಷ ಏರ್ಪಟ್ಟಿರುವುದರಿಂದ ಇಡೀ ವ್ಯವಸ್ಥೆ ಗೊಂದಲಕ್ಕೆ ಸಿಲುಕಿದೆ. ಅತಂತ್ರ ಸರ್ಕಾರದಿಂದ ರಾಜ್ಯದ ಜನತೆಗೆ ಸಂಕಷ್ಟ ಎದುರಾಗಿದೆ ಎಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ಉಸ್ತುವಾರಿ ಟಿ.ಎಂ. ಶಾಹಿದ್ ತೆಕ್ಕಿಲ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಸೋಂಕು ವ್ಯಾಪಿಸುತ್ತಿದ್ದು, ಸೋಂಕಿತರ ಮತ್ತು ಮೃತರಾದವರ ಬಗ್ಗೆ ನಿಖರ ಮಾಹಿತಿಯನ್ನು ನೀಡದ ಸರ್ಕಾರ ದೊಡ್ಡ ಮಟ್ಟದ ದಂಧೆಯಲ್ಲಿ ತೊಡಗಿದೆ ಎಂದು ಆರೋಪಿಸಿದರು.
ಕೋವಿಡ್ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು, ಸೋಂಕಿತರ ಸಂಖ್ಯೆ ಪ್ರತಿದಿನ ಹೆಚ್ಚಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ದರು. ಶಾಲೆಗಳನ್ನು ಆರಂಭಿಸುವ ಬಗ್ಗೆ ಸರ್ಕಾರದಲ್ಲಿರುವ ಸಚಿವರುಗಳೆ ಪರಸ್ಪರ ವ್ಯತಿರಿಕ್ತ ಹೇಳಿಕೆಗಳನ್ನು ನೀಡುತ್ತಿದ್ದು, ಇದೊಂದು ಗೊಂದಲಮಯದ ಕಿಚಡಿ ಸರ್ಕಾರವಾಗಿದೆ ಎಂದು ಟೀಕಿಸಿದರು.
ಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್, ಕಾಂಗ್ರೆಸ್ ಕಿಸಾನ್ ಘಟಕದ ಜಿಲ್ಲಾಧ್ಯಕ್ಷ ನೆರವಂಡ ಉಮೇಶ್, ನಗರ ಯುವ ಘಟಕದ ಅಧ್ಯಕ್ಷ ಸದಾ ಮುದ್ದಪ್ಪ, ಪರಿಶಿಷ್ಟ ಪಂಗಡ ಘಟಕದ ಮಾಜಿ ಜಿಲ್ಲಾಧ್ಯಕ್ಷ ಕೆ.ಆರ್.ಚಂದ್ರ ಹಾಗೂ ನಗರ ಎಸ್ಸಿ ಘಟಕದ ಅಧ್ಯಕ್ಷ ಮುದ್ದುರಾಜ್ ಉಪಸ್ಥಿತರಿದ್ದರು.