ಸೋಮವಾರಪೇಟೆ, ಅ. 10: ಕೇಂದ್ರ ಸರ್ಕಾರವು ಜಾರಿಗೆÉ ತಂದಿರುವ ಮಸೂದೆಗಳು ರೈತ ಹಾಗೂ ಕಾರ್ಮಿಕ ವಿರೋಧಿಯಾಗಿದ್ದು, ಇವುಗಳನ್ನು ತಕ್ಷಣ ವಾಪಸ್ ಪಡೆಯುವಂತೆ ಆಗ್ರಹಿಸಿ ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಇಲ್ಲಿನ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ ಪದಾಧಿಕಾರಿಗಳು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭ ಮಾತನಾಡಿದ ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಕೆ.ಬಿ. ರಾಜು, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು, ಎಪಿಎಂಸಿಯನ್ನೇ ದೇಶದ ಬಂಡವಾಳಶಾಹಿಗಳಿಗೆ ಮಾರಾಟ ಮಾಡಿ, ಸಣ್ಣ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಲಾಗಿದೆ. ತಕ್ಷಣ ಈ ತಿದ್ದುಪಡಿಯನ್ನು ವಾಪಾಸ್ ಪಡೆಯಬೇಕೆಂದು ಆಗ್ರಹಿಸಿದರು.
ದೇಶದ ಕೆಲ ರಾಜ್ಯಗಳಲ್ಲಿ ದಲಿತರ ಮೇಲಿನ ದೌರ್ಜನ್ಯ ಮಿತಿ ಮೀರಿದೆ. ಉತ್ತರ ಪ್ರದೇಶದಲ್ಲಿ ದಲಿತ ಯುವತಿಯರ ಮೇಲೆ ಅತ್ಯಾಚಾರ ಕೊಲೆ ನಡೆದಿವೆ. ಬಿಜೆಪಿ ನೇತೃತ್ವದ ಅಲ್ಲಿನ ಸರ್ಕಾರ ಆರೋಪಿಗಳ ರಕ್ಷಣೆಗೆ ನಿಂತಿದೆ. ಕೂಡಲೆ ಉತ್ತರಪ್ರದೇಶ ಸರ್ಕಾರವನ್ನು ವಜಾಗೊಳಿಸಿ, ರಾಷ್ಟ್ರಪತಿ ಆಡಳಿತ ಹೇರಬೇಕೆಂದು ತಾಲೂಕು ತಹಶೀಲ್ದಾರ್ ಗೋವಿಂದ ರಾಜು ಅವರ ಮೂಲಕ ರಾಷ್ಟ್ರಪತಿ ಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ಪಕ್ಷದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎಂ.ಡಿ.ಲತಾ, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಸಂಗಮೇಶ್, ದ.ಸಂ.ಸ (ಭೀಮವಾದ) ಜಿಲ್ಲಾ ಉಪಾಧ್ಯಕ್ಷ ಎಸ್.ಕೆ. ಸ್ವಾಮಿ, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಕೀರ್ತಿರಾಜು, ಪ್ರಮುಖರಾದ ಜೆ.ಆರ್. ವೀಣಾ, ಪುನಿತ್ರಾಜ್, ಮಹಾದೇವ್, ಅಭಿಷೇಕ್, ಮಣಿ ನಾಗರಾಜ್, ರಾಧಿಕ, ಮಣಿಯಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.