*ಸಿದ್ದಾಪುರ, ಅ.11 : ಕಳೆದ ಅನೇಕ ವರ್ಷಗಳಿಂದ ನಿರ್ಲಕ್ಷಿಸಲ್ಪಟ್ಟಿರುವ ಚೆನ್ನಯ್ಯನಕೋಟೆ ಗ್ರಾ.ಪಂ ವ್ಯಾಪ್ತಿಯ ದಿಡ್ಡಳ್ಳಿ ಮತ್ತು ಸುತ್ತಮುತ್ತಲ ಹಾಡಿಗಳು ಪ್ರಸ್ತುತ ಅಭಿವೃದ್ಧಿ ಪಥದತ್ತ ಸಾಗುತ್ತಿದೆ.

ದಿಡ್ಡಳ್ಳಿ ವ್ಯಾಪ್ತಿಯಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದ್ದು, ಶಾಸಕ ಕೆ.ಜಿ.ಬೋಪಯ್ಯ ಅವರ ಅನುದಾನ 80 ಲಕ್ಷ ರೂ.ಗಳಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ. ಹಾಡಿ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡಬೇಕೆನ್ನುವ ಉದ್ದೇಶದಿಂದ ನೀರಿನ ಟ್ಯಾಂಕ್ ನಿರ್ಮಾಣ ಮತ್ತು ಪೈಪ್ ಲೈನ್ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದ್ದು, ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ. ಕೇಂದ್ರದ ಸೌಭಾಗ್ಯ ಯೋಜನೆಯಡಿ 75 ಕುಟುಂಬಗಳಿಗೆ ವಿದ್ಯುತ್ ಸೌಲಭ್ಯ ದೊರೆತಿದ್ದು, ಗಿರಿಜನ ಅಭಿವೃದ್ಧಿ ಇಲಾಖೆ ಮೂಲಕ ವಸತಿ ರಹಿತರಿಗೆ ನೂತನ ಮನೆಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ಸುಮಾರು 150 ಕುಟುಂಬಗಳು ಹಕ್ಕು ಪತ್ರಕ್ಕಾಗಿ ಎದುರು ನೋಡುತ್ತಿವೆ.

ಈ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಗಿರಿಜನ ಮುಖಂಡ ಅಪ್ಪಾಜಿ ಶಾಸಕ ಕೆ.ಜಿ.ಬೋಪಯ್ಯ ಅವರ ಪ್ರಯತ್ನದಿಂದ ವಸತಿ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಬೇಕೆಂದು ಮನವಿ ಮಾಡಿದ್ದಾರೆ.