ಬ್ಲಾಕ್ ಕಾಂಗ್ರೆಸ್ ಸಭೆ

ಸೋಮವಾರಪೇಟೆ, ಅ. 17: ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಬೆಂಬಲಿತ ಅಭ್ಯರ್ಥಿಗಳನ್ನು ಆದಷ್ಟು ಬೇಗ ಘೋಷಣೆ ಮಾಡುವಂತೆ ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ ಆಗ್ರಹಿಸಲಾಯಿತು.

ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಚರ್ಚೆ ನಡೆಯಿತು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯತೆಗಳನ್ನು ಪರಿಣಾಮಕಾರಿಯಾಗಿ ಜನರ ಮುಂದಿಡಬೇಕು.

ಈ ಹಿಂದೆ ಕಾಂಗ್ರೆಸ್ ಪಕ್ಷ ಜಾರಿಗೆ ತಂದಿದ್ದ ಜನಪರ ಯೋಜನೆಗಳ ಬಗ್ಗೆ ಸ್ಥಳೀಯವಾಗಿ ಮಾಹಿತಿ ನೀಡಿ, ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.

ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಆದಷ್ಟು ಬೇಗ ಅಭ್ಯರ್ಥಿಗಳ ಆಯ್ಕೆ ಮಾಡಿದರೆ ಮಾತ್ರ ಪ್ರಚಾರ ಕಾರ್ಯ ಕೈಗೊಳ್ಳಲು ಸಾಧ್ಯವಾಗುತ್ತದೆ.

ಈ ಹಿನ್ನೆಲೆ ಪಕ್ಷದ ಮುಖಂಡರು ಗಮನ ಹರಿಸಬೇಕೆಂದು ಕಾರ್ಯಕರ್ತರು ಸಲಹೆ ನೀಡಿದರು. ಸಭೆಯಲ್ಲಿ ಉಪಸ್ಥಿತರಿದ್ದ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಎಂ. ಲೋಕೇಶ್ ಮಾತನಾಡಿ, ಈಗಿನ ಸರ್ಕಾರದ ದುರಾಡಳಿತದ ವಿರುದ್ಧ ಜಾಗೃತಿ ಮೂಡಿಸುವ ಕಾರ್ಯ ಆಗಬೇಕಿದೆ ಎಂದರು.

ಸಭೆಯಲ್ಲಿ ಕಾಂಗ್ರೆಸ್‍ನ ಹಿರಿಯ ಮುಖಂಡರಾದ ಚಂಗಪ್ಪ, ನಂದಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್, ವಿವಿಧ ಘಟಕಗಳ ಅಧ್ಯಕ್ಷರಾದ ಉದಯಶಂಕರ್, ಯತೀಶ್, ಜಯೇಂದ್ರ, ವಿ.ಎ. ಲಾರೆನ್ಸ್, ಮಹಿಳಾ ಘಟಕದ ಅಧ್ಯಕ್ಷೆ ಶೀಲಾ ಡಿಸೋಜ ಸೇರಿದಂತೆ ಇತರರು ಉಪಸ್ಥಿತರಿದ್ದರು.