ಮಡಿಕೇರಿ, ಅ. 24: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಜಿಲ್ಲಾ ಅಪರಾಧ ಪತ್ತೆದಳ ಬಂಧಿಸಿದೆ. ನಿನ್ನೆ ದಿನ ಚೆಟ್ಟಳ್ಳಿ ಕಂಡಕರೆ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಪಿರಿಯಾಪಟ್ಟಣ ತಾಲೂಕು ಮುತ್ತೂರು ಕಾಲೋನಿಯ ಶುಂಠಿ ವ್ಯಾಪಾರಿ ವೆಂಕಟಾಚಲನ ಎಂಬಾತನನ್ನು ಬಂಧಿಸಿದ ಪೊಲೀಸರು 50 ಸಾವಿರ ರೂ. ಮೌಲ್ಯದ ಒಂದು ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸ್ ಅಧೀಕ್ಷಕಿ ಕ್ಷಮಾ ಮಿಶ್ರಾ ಮಾರ್ಗದರ್ಶನದಲ್ಲಿ ಡಿಸಿಐಬಿ ಇನ್ಸ್‍ಪೆಕ್ಟರ್ ಎನ್. ಕುಮಾರ್ ಆರಾಧ್ಯ, ಪಿಎಸ್‍ಐ ಹೆಚ್.ವಿ. ಚಂದ್ರಶೇಖರ್, ಸಿಬ್ಬಂದಿಗಳಾದ ಎಎಸ್‍ಐ ಹಮೀದ್, ಯೋಗೇಶ್ ಕುಮಾರ್, ನಿರಂಜನ್, ವಸಂತ, ಶರತ್ ರೈ, ವೆಂಕಟೇಶ್, ಸುರೇಶ್, ಅನಿಲ್ ಕುಮಾರ್ ಹಾಗೂ ಶಶಿಕುಮಾರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು, ಇವರ ಕಾರ್ಯವೈಖರಿಯನ್ನು ಮೆಚ್ಚಿ ಎಸ್ಪಿ ನಗದು ಬಹುಮಾನವನ್ನು ಘೋಷಿಸಿದ್ದಾರೆ.ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಸಾಗಾಟ ಮತ್ತು ಬಳಕೆಯ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿದ್ದು, ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಗುಪ್ತವಾಗಿ ಮಾಹಿತಿ ನೀಡಿ ಮಾದಕ ವಸ್ತುಗಳ ಬಳಕೆ ಹಾಗೂ ಮಾರಾಟಕ್ಕೆ ಕಡಿವಾಣ ಹಾಕಬೇಕೆಂದು ಎಸ್ಪಿ ಕ್ಷಮಾ ಮಿಶ್ರಾ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.