ಕೂಡಿಗೆ, ಅ. 26: ಕುರುಬ ಸಮಾಜದ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ಸರಕಾರ ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕುರುಬ ಸಮಾಜದವರು ಯೋಜನೆಯ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಡಿ.ಆರ್. ಪ್ರಭಾಕರ್ ಮನವಿ ಮಾಡಿದ್ದಾರೆ.

ಸಮಾಜದ ವಾರ್ಷಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿ ಗ್ರಾಮದಲ್ಲಿ ಕಾಯ್ದಿರಿಸಿರುವ ಜಾಗದಲ್ಲಿ ಕುರುಬ ಸಮಾಜದ ಕಟ್ಟಡವನ್ನು ನಿರ್ಮಿಸಲು ಈಗಾಗಲೇ ಕ್ರಿಯಾ ಯೋಜನೆ ತಯಾರಿಸಲಾಗಿದೆ. ಮುಂದಿನ ದಿನಗಳಲ್ಲಿ ಹತ್ತು ಲಕ್ಷ ರೂ. ವೆಚ್ಚದಲ್ಲಿ ಮೊದಲ ಹಂತದ ಕಾಮಗಾರಿಯನ್ನು ಕೈಗೊಳ್ಳಲು ಆಡಳಿತ ಮಂಡಳಿಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಕ್ಷೇತ್ರದ ಶಾಸಕರ ಅನುದಾನ ಮತ್ತು ವಿವಿಧ ಜನಪ್ರತಿನಿಧಿಗಳ ಸಹಕಾರದ ಮೂಲಕ ಯೋಜನೆಯನ್ನು ಕೈಗೊಳ್ಳಲು ಪತ್ರ ವ್ಯವಹಾರ ಮಾಡುವಂತೆ ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅಡಳಿತ ಮಂಡಳಿಯ ನಿರ್ದೇಶಕರು ಮತ್ತು ಸದಸ್ಯರು ಹಾಜರಿದ್ದರು.