ಕನ್ನಡ, ಕರ್ನಾಟಕ, ಕರುನಾಡು ಎಂಬುದು ಕೇವಲ ಬರೀ ನೆಲ ಮತ್ತು ಭಾಷೆಯಲ್ಲ. ಅದೊಂದು ಕನ್ನಡಿಗರ ಭಾವನೆ ಮತ್ತು ಬಾಂಧವ್ಯವಾಗಿದೆ. ಕೇವಲ ಕನ್ನಡ ರಾಜ್ಯೋತ್ಸವದ ವೇಳೆ ಕನ್ನಡದ ಹಿರಿಮೆ ಮತ್ತು ಗರಿಮೆಗಳನ್ನು ನೆನಪಿಸಿಕೊಳ್ಳುವ ‘ನವೆಂಬರ್ ಕನ್ನಡಿಗರು’ ನಾವಾಗಬೇಕಿಲ್ಲ. ಕವಿಮನದ ಆಶಯದಂತೆ ಕನ್ನಡ ರಾಜ್ಯೋತ್ಸವ ನಮ್ಮೆಲ್ಲರ ನಿತ್ಯೋತ್ಸವವಾಗಬೇಕು.ಸುಮಾರು 2000 ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆ ಹಾಗೂ ಸಾಹಿತ್ಯದ ಹಿರಿಮೆ ವಿಶ್ವವ್ಯಾಪಿಯಾಗಿದ್ದು, ಪಂಪ, ರನ್ನ, ಜನ್ನ, ಪೊನ್ನ, ಕುಮಾರವ್ಯಾಸ ಮುಂತಾದ ಕವಿಪುಂಗವರು ಕನ್ನಡ ಭಾಷಾ ದೀವಿಗೆಯನ್ನು ಆಗಸದೆತ್ತರಕ್ಕೆ ಬೆಳಗಿಸಿದ್ದಾರೆ. ಪುರಂದರದಾಸ-ಕನಕದಾಸರಂತಹ ದಾಸವರೇಣ್ಯರು ಭಕ್ತಿ ಪಂಥ ಮತ್ತು ಕೀರ್ತನೆಗಳ ಮೂಲಕ ಹಾಗೂ ಬಸವಾದಿ ಶರಣರು ವಚನಗಳ ಮೂಲಕ ಸಾಮಾಜಿಕ ಕ್ರಾಂತಿ ಮಾಡಿ ನಾಡು-ನುಡಿಯನ್ನು ಶ್ರೀಮಂತಗೊಳಿಸಿದ್ದಾರೆ. ಕನ್ನಡ ಸಾರಸ್ವತ ಲೋಕವು 8 ಜ್ಞಾನಪೀಠ ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿರುವುದು ಕನ್ನಡ ಭಾಷೆಯ ಗರಿಮೆಯಾಗಿದೆ. ಕುವೆಂಪು, ಬೇಂದ್ರೆ, ಕಾರಂತ, ಮಾಸ್ತಿ, ಗೋಕಾಕ್ ರಂತಹ ಮಹನೀಯರು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಸಾಹಿತ್ಯ, ಸಂಸ್ಕøತಿ, ಸಂಗೀತ, ಸದಭಿರುಚಿ, ಸಂಪ್ರದಾಯ, ಸಂಸ್ಕಾರ ಸಹಿತ ಎಲ್ಲ ಕ್ಷೇತ್ರದಲ್ಲೂ ನಾವು ಕಡಿಮೆಯಿಲ್ಲ. ಇಂತಹ ಪವಿತ್ರ ನೆಲದಲ್ಲಿ ಜನಿಸಿದ ನಾವೆಲ್ಲರೂ ಪುಣ್ಯವಂತರೆ.

-ವಿ. ಸೋಮಣ್ಣ, ಜಿಲ್ಲಾ ಉಸ್ತುವಾರಿ ಸಚಿವರು