ಪಾಲಿಬೆಟ್ಟ, ನ. 3: ಪಾಲಿಬೆಟ್ಟ ಸರಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಕೊಠಡಿಯನ್ನು ಜಿಲ್ಲಾ ಪಂಚಾಯಿತಿ ಸದಸ್ಯ ಮೂಕೊಂಡ ವಿಜು ಸುಬ್ರಮಣಿ ಉದ್ಘಾಟಿಸಿದರು. ಆಸ್ಪತ್ರೆಯ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಾತನಾಡಿ, ಪಾಲಿಬೆಟ್ಟ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಕಾರ್ಮಿಕ ಕುಟುಂಬಗಳು ಸಾರ್ವಜನಿಕರು ಅಧಿಕವಾಗಿದ್ದು ಆಸ್ಪತ್ರೆಯ ಸೇವೆಗಳು ಉತ್ತಮ ರೀತಿಯಲ್ಲಿ ಸಿಗಲು ಪ್ರಾಮಾಣಿಕ ಪ್ರಯತ್ನ ಮಾಡಿದ ಹಿನ್ನೆಲೆ ಇದೀಗ ಶಸ್ತ್ರ ಚಿಕಿತ್ಸಾ ಕೊಠಡಿ ಜನರ ಸೇವೆಗೆ ಲಭ್ಯವಾಗಲಿದ್ದು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.
ತಾಲೂಕು ಪಂಚಾಯಿತಿ ಸದಸ್ಯ ಅಜಿತ್ ಕರುಂಬಯ್ಯ ಮಾತನಾಡಿ, ಗ್ರಾಮೀಣ ಭಾಗದ ಜನರಿಗೆ ಉತ್ತಮ ಸೇವೆ ನೀಡಲು ವೈದ್ಯಾಧಿಕಾರಿಗಳು ಆಸ್ಪತ್ರೆಯಲ್ಲಿ ಸೇವೆ ನೀಡುತ್ತಿದ್ದಾರೆ ಇದರೊಂದಿಗೆ ಎಲ್ಲ ಸೌಲಭ್ಯಗಳು ಸಿಗಲಿದ್ದು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದರು.
ವೈದ್ಯಾಧಿಕಾರಿ ಲೋಹಿತ್ ಮಾತನಾಡಿ, ಆರೋಗ್ಯ ಇಲಾಖೆ ಹಾಗೂ ಜಿ.ಪಂ. ಸದಸ್ಯರ ಸಹಕಾರದಿಂದ ಆಸ್ಪತ್ರೆಗೆ ಸೌಲಭ್ಯಗಳು ಲಭಿಸಿವೆ. ನಾಲ್ಕು ವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ ಆರೋಗ್ಯ ಸೇವೆ ನೀಡಲು ಆಸ್ಪತ್ರೆ ಸಿಬ್ಬಂದಿಗಳು ಮುಂದಾಗಿದ್ದಾರೆ.
ಸರಕಾರದ ಸೌಲಭ್ಯಗಳನ್ನು ಪಡೆದುಕೊಂಡು ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಎಲ್ಲರೂ ಕೈಜೋಡಿಸಬೇಕೆಂದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯ ದೀಪಕ್ ಗಣಪತಿ, ವೈದ್ಯಾಧಿಕಾರಿ ಜಗದೀಶ್, ದಾದಿಯರು, ಆಶಾ ಕಾರ್ಯಕರ್ತರು ಹಾಜರಿದ್ದರು.
-ಪುತ್ತಂ ಪ್ರದೀಪ್