ಮಡಿಕೇರಿ, ನ. 5: ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕುಟುಂಬ ಸಹಿತ ಕೊಡಗಿಗೆ ಆಗಮಿಸಿದ್ದಾರೆ. ತಾಜ್ ರೆಸಾರ್ಟ್‍ನಲ್ಲಿ ವಾಸ್ತವ್ಯ ಹೂಡಿರುವ ಅವರು, ತಾ. 6ರಂದು (ಇಂದು) ಜಿಲ್ಲೆಯ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.ತಾಜ್‍ಗೆ ಬಂದಿಳಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡಗಿಗೆ ತಾನು ಬಹಳ ಹಿಂದೆಯೆ ಭೇಟಿ ನೀಡಬೇಕಿತ್ತು. ಆದರೆ, ಹಲವಾರು ಕಾರಣಗಳಿಂದಾಗಿ ಅದು ಸಾಧ್ಯವಾಗಿರಲಿಲ್ಲ. ಇದೀಗ ತಾನು ಆಗಮಿಸಿದ್ದು, ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ವಿವರ ಮಾಹಿತಿ ಪಡೆಯಲಿದ್ದೇನೆ ಎಂದರು. ಕರ್ನಾಟಕ - ಕೇರಳ ಗಡಿಯಲ್ಲಿ ನಕ್ಸಲ್ ಚಟುವಟಿಕೆ ಕಂಡು ಬಂದಿರುವ ಸಂಬಂಧವೂ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಿದ್ದೇನೆ ಎಂದ ಅವರು, ಕೊಲೆ ಪ್ರಕರಣವೊಂದರ ಸಂಬಂಧ ಮಾಜಿ ಸಚಿ (ಮೊದಲ ಪುಟದಿಂದ) ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದೆ. ಈ ಬಗ್ಗೆ ತಾನು ಪ್ರತಿಕ್ರಿಯಿಸುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಗೃಹ ಸಚಿವರ ಭೇಟಿ ಹಿನ್ನೆಲೆಯಲ್ಲಿ ತಾಜ್ ರೆಸಾರ್ಟ್ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಮೂರು ದಿನಗಳ ಕಾಲ ಸಚಿವರು ಜಿಲ್ಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ತಿಳಿದು ಬಂದಿದೆ.