ಕುಶಾಲನಗರ, ನ. 6: ಜನಾದೇಶ ಇಲ್ಲದಿದ್ದರೂ ಕೂಡ ಬಿಜೆಪಿ ವಾಮಮಾರ್ಗದ ಮೂಲಕ ಜಿಲ್ಲೆಯ ಮೂರು ಪಟ್ಟಣ ಪಂಚಾಯಿತಿಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್‍ಕುಮಾರ್ ಆರೋಪಿಸಿದ್ದಾರೆ.
ಕುಶಾಲನಗರದಲ್ಲಿ ಸುದ್ದಿಗಾರ ರೊಂದಿಗೆ ಈ ಬಗ್ಗೆ ಮಾತನಾಡಿದ ಅವರು, ಬಿಜೆಪಿ ತಮಗೆ ಅನುಕೂಲವಾಗುವ ರೀತಿಯಲ್ಲಿ ಮೀಸಲಾತಿ ನಿಗದಿಪಡಿಸಿ ಸಾಮಾಜಿಕ ನ್ಯಾಯವನ್ನು ಕಡೆಗಣಿಸಿದೆ. ಸ್ಥಳೀಯ ಶಾಸಕರು ಹಾಗೂ ಸರಕಾರ ಕೂಡ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದರು. ಜಿಲ್ಲೆಯ ಮೂರು ಪ.ಪಂ.ಗಳಲ್ಲಿ ಕಾಂಗ್ರೆಸ್ ಜೆಡಿಎಸ್ ಮತ್ತು ಸ್ವತಂತ್ರ ಅಭ್ಯರ್ಥಿಗಳ ನೆರವಿನೊಂದಿಗೆ ಅಧಿಕಾರ ಹಿಡಿಯುವ ಪ್ರಯತ್ನ ನಡೆಸಿತ್ತು. ಬಿಜೆಪಿಯೇತರ ಪಕ್ಷಗಳಲ್ಲಿ ಮೀಸಲಾತಿ ಅನ್ವಯ ಅಭ್ಯರ್ಥಿಯಿಲ್ಲದ ಕಾರಣ ಸೋಮವಾರಪೇಟೆ ಮತ್ತು ವೀರಾಜಪೇಟೆ ಪ.ಪಂ.ಗಳಲ್ಲಿ ಅಧ್ಯಕ್ಷ ಸ್ಥಾನ ಬಿಜೆಪಿಗೆ ಲಭಿಸಿದೆ. ಕುಶಾಲನಗರದಲ್ಲಿ ಜೆಡಿಎಸ್ ಸದಸ್ಯರನ್ನು ಖರೀದಿಸಿ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಅವರು ಆರೋಪಿಸಿದರು.
ಸೋಮವಾರಪೇಟೆ ಪ.ಪಂ.ನಲ್ಲಿ ಬಿಜೆಪಿ ಸದಸ್ಯರು ಕೇವಲ ಮೂರು ಮಂದಿಯಿದ್ದು ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟು 7 ಮಂದಿ ಸದಸ್ಯರಿದ್ದಾರೆ. ವೀರಾಜಪೇಟೆಯಲ್ಲಿ 8 ಮಂದಿ ಮಾತ್ರ ಬಿಜೆಪಿ ಸದಸ್ಯರಿದ್ದ ಕಾಂಗ್ರೆಸ್, ಜೆಡಿಎಸ್ ಹಾಗೂ ಸ್ವತಂತ್ರ ಅಭ್ಯರ್ಥಿಗಳು ಒಟ್ಟು 10 ಮಂದಿ ಇದ್ದಾರೆ. ಆದ್ದರಿಂದ ಈ ಎರಡೂ ಪ.ಪಂ.ಗಳಲ್ಲಿ ಇತರ ಪಕ್ಷಗಳ ಸಹಕಾರವಿಲ್ಲದೆ ಬಿಜೆಪಿ ಏಕಪಕ್ಷೀಯ ನಿರ್ಧಾರ ಕೈಗೊಳ್ಳುವುದು, ಅಭಿವೃದ್ಧಿ ಕಾರ್ಯ ನಡೆಸುವುದು ಕಷ್ಟಸಾಧ್ಯವಾಗಿದೆ. ಆದ್ದರಿಂದ ಈ ಪಂಚಾಯಿತಿಗಳಲ್ಲಿ ಬಿಜೆಪಿಯೇತರ ಪಕ್ಷಗಳು ಪರೋಕ್ಷವಾಗಿ ಅಧಿಕಾರ ನಡೆಸಲಿವೆ. ಕುಶಾಲನಗರ ಪ.ಪಂ.ನ ಆಡಳಿತ ಶಾಶ್ವತವಲ್ಲ. ಮುಂದಿನ ದಿನಗಳಲ್ಲಿ ಎರಡೂ ಪಕ್ಷಗಳ ನಡುವೆ ಒಡಕು ಕಾಣಿಸಿಕೊಳ್ಳುವ ಸಾಧ್ಯತೆ ಅಧಿಕವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.