ಬೆಂಗಳೂರು, ನ. 10 : ರಾಜ್ಯದ ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಎರಡು ಕ್ಷೇತ್ರಗಳಲ್ಲೂ ಬಿ.ಜೆ.ಪಿ. ಜಯಭೇರಿ ಬಾರಿಸಿದೆ. ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಹಿಂದೆ ಕಾಂಗ್ರೆಸ್‍ನಿಂದ ಎರಡು ಬಾರಿ ಗೆಲುವು ಸಾಧಿಸಿದ್ದ ಮುನಿರತ್ನ ಅವರು ಈ ಬಾರಿ ಬಿಜೆಪಿ ಸೇರಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಮುನಿರತ್ನ ಅವರು ಅಂತಿಮವಾಗಿ 57,672 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಬಿಜಿಪಿಯ ಮುನಿರತ್ನ ಅವರು ಒಟ್ಟು 125665 ಮತಗಳನ್ನು ಪಡೆದರೆ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು 67993 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಬಿಜೆಪಿ ಮತ್ತು ಕಾಂಗ್ರೆಸ್‍ನ ಅಬ್ಬರದ ಪ್ರಚಾರ, ಆರೋಪ ಪ್ರತ್ಯಾರೋಪ, ಜಾತಿ, ಕಣ್ಣೀರ ರಾಜಕಾರಣದ ಕಾರಣದಿಂದ ರಾಜರಾಜೇಶ್ವರಿ ನಗರದ ಉಪ ಚುನಾವಣೆ ಭಾರೀ ಕುತೂಹಲ ಕೆರಳಿಸಿತ್ತು. ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ರಾಜೇಶ್ ಗೌಡ ಅವರು 72,739 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ 60,321 ಮತ್ತು ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ 34,707 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ 12,418 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಬಿಹಾರ್‍ನಲ್ಲೂ ಮುನ್ನಡೆ
ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶದ ಮತ ಎಣಿಕೆ ಕೂಡ ಇಂದು ಬೆಳಿಗ್ಗೆಯಿಂದ ಆರಂಭವಾಗಿದೆ. ತಡ ರಾತ್ರಿಯ ಮತ ಎಣಿಕೆ ವೇಳೆ ಲಭಿಸಿದ ಮಾಹಿತಿ ಪ್ರಕಾರ ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿ ಪಡೆ 125 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಆರ್.ಜೆ.ಡಿ. ಮೈತ್ರಿ ಪಡೆ 110 ಕ್ಷೇತ್ರಗಳಲ್ಲಿ ತನ್ನ ಇರುವಿಕೆಯನ್ನು ಸಾಬೀತುಪಡಿಸಿದೆ.