ಸೋಮವಾರಪೇಟೆ, ನ. 12: ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ಜಾರಿಗೆ ತರಬೇಕು. ಹರಿಯಾಣದಲ್ಲಿ ನಡುರಸ್ತೆಯಲ್ಲಿ ಯುವತಿಯನ್ನು ಹತ್ಯೆಗೈದ ಆರೋಪಿ ತೌಫೀಕ್‍ಗೆ ಗಲ್ಲು ಶಿಕ್ಷೆಯನ್ನು ವಿಧಿಸಬೇಕೆಂದು ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು.

ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಲವ್‍ಜಿಹಾದ್ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿದರು.

ಹರಿಯಾಣದ ಫರಿದಾಬಾದ್ ನಲ್ಲಿ ಮತಾಂಧನ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಹಿಂದೂ ಯುವತಿಯನ್ನು ನಡುರಸ್ತೆಯಲ್ಲಿ ಹತ್ಯೆ ಮಾಡಲಾಗಿದೆ.

ಇಂತಹ ಘಟನೆಗಳು ದೇಶಾದ್ಯಂತ ಆಗಾಗ್ಗೆ ನಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕಲೇಬೇಕಿದೆ ಎಂದು ಬಿಜೆಪಿ ಪ್ರಮುಖರಾದ ರೂಪಾ ಸತೀಶ್ ಆಗ್ರಹಿಸಿದರು.

ಲವ್ ಜಿಹಾದ್ ಮೂಲಕ ಹಿಂದೂ ಸಮಾಜದ ಹೆಣ್ಣು ಮಕ್ಕಳನ್ನು ಪ್ರೀತಿಯ ನಾಟಕವಾಡಿ ಬಲೆಗೆ ಬೀಳಿಸುವ ಕೆಲಸ ನಡೆಯುತ್ತಿದೆ. ನಂತರ ಮತಾಂತರ ಮಾಡಿ ಹಿಂದೂ ಹೆಣ್ಣುಮಕ್ಕಳ ಭವಿಷ್ಯವನ್ನು ಹಾಳು ಮಾಡುವ ಹುನ್ನಾರ ನಡೆಯುತ್ತಿದೆ. ಪ್ರೀತಿಸಲು ನಿರಾಕರಿಸಿದರೆ ಹತ್ಯೆ ಮಾಡುವಂತಹ ಘಟನೆಗಳು ಮರುಕಳಿಸುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಕಠಿಣ ಕಾನೂನಿನ ಅಗತ್ಯವಿದೆ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ನಂತರ ಪುಟ್ಟಪ್ಪ ವೃತ್ತದಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ತಾಲೂಕು ತಹಶೀಲ್ದಾರ್ ಮೂಲಕ ರಾಜ್ಯ ಪಾಲರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಸುಭಾಷ್ ತಿಮ್ಮಯ್ಯ, ತಾಲೂಕು ಅಧ್ಯಕ್ಷ ಎಂ.ಬಿ. ಉಮೇಶ್, ಪ್ರಧಾನ ಕಾರ್ಯದರ್ಶಿ ಸುನಿಲ್, ಮಾತೃ ಸುರಕ್ಷಾ ತಾಲೂಕು ಸಂಚಾಲಕ ಬೋಜೇಗೌಡ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಕೆ. ಮಾದಪ್ಪ, ಯುವ ಮೋರ್ಚಾ ಅಧ್ಯಕ್ಷ ದರ್ಶನ್ ಜೋಯಪ್ಪ, ಪ್ರಮುಖರಾದ ಸಿ.ಪಿ. ಗೋಪಾಲ್, ಮಹೇಶ್ ತಿಮ್ಮಯ್ಯ, ಅರೆಯೂರು ಜಯಣ್ಣ, ಯಡವನಾಡು ರಮೇಶ್, ಬಿಜೆಪಿ ಎಸ್‍ಟಿ ಮೋರ್ಚಾ ಜಿಲ್ಲಾಧ್ಯಕ್ಷ ಪ್ರತಾಪ್, ಮಸಗೋಡು ಸುರೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.