ವೀರಾಜಪೇಟೆ, ನ. 20: ವೀರಾಜಪೇಟೆಯ ಸಮುಚ್ಚಯ ನ್ಯಾಯಾಲಯದಲ್ಲಿ ಡಿ. 19 ರಂದು ಬೃಹತ್ ಮೆಘಾ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಈ ಸಂಬಂಧ ಸಮುಚ್ಚಯ ನ್ಯಾಯಾಲಯದಲ್ಲಿ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿತ್ತು.
ಸಮುಚ್ಚಯ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಜಿ. ಲೋಕೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮೆಘಾ ಅದಾಲತ್‍ನ್ನು ಯಾವ ರೀತಿಯಲ್ಲಿ ನಡೆಸಬೇಕೆಂಬ ಬಗ್ಗೆ ವಿಚಾರ ವಿನಿಮಯ ನಡೆಯಿತು.
ತಾಲೂಕು ಕಾನೂನು ಸೇವೆಗಳ ಸಮಿತಿ ವತಿಯಿಂದ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮೆಘಾ ಅದಾಲತ್‍ನ ಪೂರ್ವಭಾವಿ ಸಭೆಗೆ ಸಂಬಂಧಿಸಿದಂತೆ ಪ್ರಧಾನ ಸಿವಿಲ್ ನ್ಯಾಯಾಧೀಶ ಎನ್.ವಿ. ಕೋನಪ್ಪ, ಅಪರ ಸಿವಿಲ್ ನ್ಯಾಯಾಧೀಶೆ ಮಹಾಲಕ್ಷ್ಮಿ ಹಾಗೂ ವಕೀಲರ ಸಂಘದ ಅಧ್ಯಕ್ಷ ಎಂ.ಎಂ. ನಂಜಪ್ಪ ಮತ್ತು ಹಿರಿಯ ವಕೀಲರುಗಳು ಮಾತನಾಡಿದರು.
ಸಮುಚ್ಚಯ ನ್ಯಾಯಾಲಯದ ಸಭಾಂಗಣದಲ್ಲಿ ನಡೆಯುವ ಮೆಘಾ ಅದಾಲತ್‍ನ್ನು ಡಿ. 19 ರಂದು ಕಕ್ಷಿದಾರರಿಗೆ ರಾಜಿಯಾಗುವಂತಹ ಪ್ರಕರಣಗಳನ್ನು ಸೌಹಾರ್ದಯುತವಾಗಿ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶವಿದೆ. ಆಯ್ದ ಪ್ರಕರಣಗಳನ್ನು ಸ್ಥಳದಲ್ಲಿಯೇ ರಾಜಿ ಪರಿಹಾರ ಮಾಡಿಕೊಳ್ಳಬಹುದಾಗಿದೆ ಎಂದು ಸಭೆ ತೀರ್ಮಾನಿಸಿತು.