ಮಡಿಕೇರಿ, ನ. 21: ಗ್ರಾಮ ಪಂಚಾಯಿತಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸುವುದರ ಜೊತೆಗೆ ಸವಾಲಿನಿಂದ ಕರ್ತವ್ಯ ನಿರ್ವಹಿಸುವಂತೆ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗ್ರಾ.ಪಂ. ಚುನಾವಣೆ ಹಿನ್ನೆಲೆ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗ್ರಾ.ಪಂ. ಚುನಾವಣಾ ವೇಳಾಪಟ್ಟಿಯು ಸದ್ಯದಲ್ಲಿಯೇ ಘೋಷಣೆಯಾಗಲಿದೆ. ಆ ದಿಸೆಯಲ್ಲಿ ಶ್ರದ್ಧೆಯಿಂದ ಚುನಾವಣೆ ನಡೆಸಬೇಕಿದೆ. ಈ ಸಂಬಂಧ ಅಗತ್ಯ ತಯಾರಿ ಮಾಡಿಕೊಳ್ಳಬೇಕಿದೆ, ಚುನಾವಣಾಧಿ ಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಯಾಗಿ ನೇಮಕ ಗೊಂಡವರು ತಮ್ಮ ಗ್ರಾ.ಪಂ.ವ್ಯಾಪ್ತಿಯ ಮತಗಟ್ಟೆ ಕೇಂದ್ರಗಳು ಸುಸ್ಥಿತಿಯಲ್ಲಿದೆಯೇ ಎಂಬುದನ್ನು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿ ಖಾತರಿಪಡಿಸಿಕೊಳ್ಳಬೇಕು. ಗ್ರಾ.ಪಂ.ಕಚೇರಿಯಲ್ಲಿ ಚುನಾವಣಾ ಕಚೇರಿಯನ್ನಾಗಿ ಮಾಡಿಕೊಂಡು ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಿಕೊಳ್ಳಬೇಕು. ದೂರುಗಳು ಬರದಂತೆ ಕರ್ತವ್ಯ ನಿರ್ವಹಿಸುವಂತೆ ಅವರು ಸೂಚಿಸಿದರು.

ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು ಅವರು ಗ್ರಾ.ಪಂ.ಚುನಾವಣೆಯಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ತಹಶೀಲ್ದಾರ್ ಮಹೇಶ್, ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳು ಇತರರು ಇದ್ದರು.