ಸೋಮವಾರಪೇಟೆ, ನ.21: ದೇಶೀಯ ಸಂಸ್ಕಾರ ವೃದ್ಧಿಯಾದರೆ ಮಾತ್ರ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸುತ್ತದೆ. ಈ ನಿಟ್ಟಿನಲ್ಲಿ ಮಕ್ಕಳಿಗೆ ಉತ್ತಮ ಸಂಸ್ಕಾರ ತುಂಬುವ ಕಾರ್ಯ ಆಗಬೇಕಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಹೇಳಿದರು.

ತಾಲೂಕು ಕಸಾಪ ವತಿಯಿಂದ ಇಲ್ಲಿನ ಮಹಿಳಾ ಸಮಾಜದಲ್ಲಿ ಆಯೋಜಿಸಿದ್ದ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರಿಗೆ ಭಾವಗೀತೆ ಗಾಯನ ಸ್ಪರ್ಧೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪೋಷಕರು ಕಲೆ, ಸಾಹಿತ್ಯದ ಬಗ್ಗೆ ಆಸಕ್ತಿ ವಹಿಸಿದರೆ ಮಾತ್ರ ಮಕ್ಕಳೂ ಸಹ ಆಸಕ್ತಿ ಬೆಳೆಸಿಕೊಳ್ಳುತ್ತಾರೆ. ಇಲ್ಲವಾದಲ್ಲಿ ಮೊಬೈಲ್, ಟಿ.ವಿ.ಗಳಲ್ಲೇ ಮಕ್ಕಳು ಸಮಯ ಕಳೆಯುತ್ತಾರೆ. ಪೋಷಕರು ತಮ್ಮ ಮಕ್ಕಳಿಗೆ ಸಾಹಿತ್ಯದ ಸಂಸ್ಕಾರ ನೀಡುವತ್ತ ಗಮನ ಹರಿಸಬೇಕು ಎಂದರು.

ಕನ್ನಡ ಸಾಹಿತ್ಯ ಪರಿಷತ್‍ನಿಂದ ತಾ. 28ರಂದು ಮಡಿಕೇರಿಯಲ್ಲಿ ಶಿಕ್ಷಕರಿಗೆ ಪುರಸ್ಕಾರ, ತಾ. 29ರಂದು ಕುಶಾಲನಗರದಲ್ಲಿ ಭಾವಗೀತೆ ಸ್ಪರ್ಧೆ ಆಯೋಜಿಸಲಾಗಿದೆ. ಕನ್ನಡ ಭಾಷೆ, ಸಾಹಿತ್ಯಕ್ಕೆ ಸಂಬಂಧಿಸಿದಂತೆ ಕಸಾಪ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದರು.

ಭಾವಗೀತೆ ಗಾಯನ ಸ್ಪರ್ಧೆಯಲ್ಲಿ 30ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು. ಇದೇ ಸಂದರ್ಭ ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕøತರಾದ ಎಲ್.ಎಂ. ಪ್ರೇಮ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಘಟಕದ ಅಧ್ಯಕ್ಷ ಎಚ್.ಜೆ. ಜವರಪ್ಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಕೆ. ಪಾಂಡು, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಪದವೀಧರ ಮುಖ್ಯೋಪಾಧ್ಯಾಯರಾದ ಎಂ.ಜೆ. ಅಣ್ಣಮ್ಮ, ಪಟ್ಟಣ ಪಂಚಾಯಿತಿಯ ನಳಿನಿ ಗಣೇಶ್, ಸಂಜೀವ, ಜಿಲ್ಲಾ ಕಸಾಪ ಕೋಶಾಧಿಕಾರಿ ಎಸ್.ಎ. ಮುರಳೀಧರ್, ಜಿಲ್ಲಾ ಪ್ರತಿನಿಧಿ ಸುಮಾ ಸುದೀಪ್, ತಾಲೂಕು ಕಾರ್ಯದರ್ಶಿ ಲೋಕೇಶ್, ಕೋಶಾಧ್ಯಕ್ಷ ವೀರರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.