ನಾಪೆÇೀಕ್ಲು, ಡಿ. 3: ಇದು ಸ್ಪರ್ಧಾತ್ಮಕ ಯುಗ. ವಿದ್ಯಾರ್ಥಿಗಳು ಕಠಿಣ ಪರಿಶ್ರಮದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸಣ್ಣ ತರಗತಿಯಲ್ಲಿಯೇ ತಯಾರಾಗಬೇಕು. ಆಗ ಮಾತ್ರ ಉನ್ನತ ಉದ್ಯೋಗ ಪಡೆಯಲು ಸಾಧ್ಯ ಎಂದು ಕುಂಜಿಲ-ಕಕ್ಕಬ್ಬೆ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ನಿಲೇಶ್ ಸಿಂಧೆ ಡಿಯೋಬಾ ಹೇಳಿದರು.

ಸಮೀಪದ ಕೆ.ಪಿ. ಬಾಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಭವನದಲ್ಲಿ ನಡೆದ ಮಕ್ಕಳ ಗ್ರಾಮಸಭೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಶೋಕ್ ಮಾತನಾಡಿ, ಕೆ.ಪಿ. ಬಾಣೆ ಶಾಲೆಗೆ ಎಂ.ಜಿ.ಎನ್.ಆರ್.ಜಿ.ಎ. ಯೋಜನೆಯಡಿಯಲ್ಲಿ ಹೂತೋಟವನ್ನು ಮಾಡಿಕೊಡಲಾಗುವದು. ಕಸ ವಿಲೇವಾರಿಗಾಗಿ ಗ್ರಾಮ ಪಂಚಾಯಿತಿ ವತಿಯಿಂದ ವಾಹನ ಖರೀದಿಸಿದ್ದು, ಕೂಡಲೇ ಕಸ ವಿಲೇವಾರಿಗೆ ಕ್ರಮಕೈಗೊಳ್ಳಲಾಗುವದು ಎಂದು ಭರವಸೆ ನೀಡಿದರು.

ವಿದ್ಯಾರ್ಥಿಗಳು ಕಸ ವಿಲೇವಾರಿಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದೇ ಸ್ಥಳದಲ್ಲಿ ಎಲ್ಲಾ ಶಾಲೆಯ ವಿದ್ಯಾರ್ಥಿಗಳು, ಉಪಾಧ್ಯಾಯರು ಒಟ್ಟಿಗೆ ಸೇರಿ ರಾಷ್ಟ್ರೀಯ ಹಬ್ಬವನ್ನು ಆಚರಿಸಲು ವ್ಯವಸ್ಥೆ ಮಾಡುವಂತೆ ಕೋರಿದರು.

ಸಭೆಯ ಅಧ್ಯಕ್ಷತೆಯನ್ನು ಕೆ.ಪಿ. ಬಾಣೆ ಶಾಲೆಯ ವಿದ್ಯಾರ್ಥಿನಿ ಪಿ.ಎ. ಸುರಯ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕೆ.ಪಿ. ಬಾಣೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಎಂ.ಎಂ. ಅಜೀಜ್, ಗ್ರಾಮ ಪಂಚಾಯಿತಿ ಸಿಬ್ಬಂದಿಗಳಾದ ಮಂಜಪ್ಪ, ದಿವ್ಯಾ, ಮತ್ತಿತರರು ಇದ್ದರು.

ಕೆ.ಪಿ. ಬಾಣೆ ಶಾಲೆಯ ವಿದ್ಯಾರ್ಥಿನಿಯರಿಂದ ಪ್ರಾರ್ಥನೆ, ಮುಖ್ಯ ಶಿಕ್ಷಕಿ ಗಂಗಮ್ಮ ಸ್ವಾಗತ, ಕಕ್ಕಬ್ಬೆ ವಸತಿ ಶಾಲೆಯ ಮುಖ್ಯ ಶಿಕ್ಷಕಿ ಸುಮಯ್ಯ ವಂದಿಸಿದರು.