ಕೂಡಿಗೆ, ಡಿ. 3: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2016 ರಿಂದ 2020 ರವರೆಗಿನ ಜಮಾಬಂದಿ ಕಾರ್ಯಕ್ರಮವು ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಹೇಮಂತ್‍ಕುಮಾರ್ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಯಿಷಾ ಅವರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ವಿವಿಧ ಕಾಮಗಾರಿಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ಸಭೆಯಲ್ಲಿ ಮಂಡಿಸಿದರು.

ಕಾಮಗಾರಿಗಳ ಕ್ರಿಯಾ ಯೋಜನೆ ಹಾಗೂ ಪೂರ್ಣಗೊಂಡ ಕಾಮಗಾರಿಗಳ ಲೆಕ್ಕಗಳನ್ನು ಸಂಬಂಧಿಸಿದ ಇಲಾಖೆಯ ಇಂಜಿನಿಯರ್ ಸಭೆಗೆ ವಿವರಣೆ ನೀಡಿದರು.

ಸಭೆಯಲ್ಲಿ ಗ್ರಾಮದ ಪ್ರಮುಖರಾದ ಕೆ.ಎಸ್. ಶಾಂತಾರಾಮ್ ಮತ್ತು ಐ.ಎಸ್. ಗಣೇಶ್ ಸೇರಿದಂತೆ ಅನೇಕ ಮಂದಿ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಿದರು.

ಜಮಾಬಂದಿ ಕಾರ್ಯಕ್ರಮದ ನೋಡಲ್ ಅಧಿಕಾರಿಯಾಗಿ ಹೇಮಂತ್ ಆಗಮಿಸಿದರು. ಸಭೆಯಲ್ಲಿ ಹಾಜರಿದ್ದ ಗ್ರಾಮಸ್ಥರು ತಮ್ಮ ತಮ್ಮ ಗ್ರಾಮದ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಅಲ್ಲದೆ ಮುಂದಿನ ಸಾಲಿನಲ್ಲಿ ಅಗತ್ಯವಿರುವ ಕಾಮಗಾರಿಗಳ ಪಟ್ಟಿಯನ್ನು ತಯಾರಿಸಲು ಸೂಚನೆ ನೀಡಿದರು. ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶಿಲ್ಪಾ ಸ್ವಾಗತಿಸಿ, ವಂದಿಸಿದರು.