ಮಡಿಕೇರಿ, ಡಿ.7: ಕಾಂಗ್ರೆಸ್ ಪಕ್ಷ ಕೊಡಗಿನ ಎಲ್ಲಾ ಗ್ರಾ.ಪಂ ಗಳಲ್ಲಿ ಅಧಿಕಾರ ಹಿಡಿಯುವಷ್ಟು ಶಕ್ತವಾಗಿದ್ದು, ಮತದಾರರು ಈ ಬಾರಿ ಪಕ್ಷಕ್ಕೆ ಬೆಂಬಲ ನೀಡಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೆಪಿಸಿಸಿ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಗ್ರಾ.ಪಂ ಚುನಾವಣೆಯ ಪೂರ್ವ ಸಿದ್ಧತಾ ಸಭೆಯಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಅವರು ಕಾಂಗ್ರೆಸ್ ಅಭಿವೃದ್ಧಿ ಪರ ಕಾಳಜಿ ಹೊಂದಿದೆ. ಗ್ರಾಮೀಣ ಭಾಗದಲ್ಲೂ ಸಾಮಾಜಿಕ ಜಾಲತಾಣಗಳ ಮೂಲಕ ಪರಿಣಾಮಕಾರಿಯಾಗಿ ಮತದಾರರ ಮನವೊಲಿಸುವ ಕಾರ್ಯವನ್ನು ಮಾಡುವಂತೆ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಭೆಯಲ್ಲಿ ಸಲಹೆ ನೀಡಿದ್ದು, ಜಿಲ್ಲಾ ಕಾಂಗ್ರೆಸ್ ಈಗಾಗಲೇ ಕಾರ್ಯೋನ್ಮುಖವಾಗಿದೆ ಎಂದು ಮಂಜುನಾಥ್ ಕುಮಾರ್ ತಿಳಿಸಿದರು.
ರಾಜ್ಯದ ಮಟ್ಟದ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾಅಚ್ಚಯ್ಯ ಹಾಗೂ ಜಿ.ಪಂ ಸದಸ್ಯೆ ಕೆ.ಪಿ.ಚಂದ್ರಕಲಾ ಪಾಲ್ಗೊಂಡಿದ್ದರು.