ಗೋಣಿಕೊಪ್ಪಲು, ಡಿ. 7: ಭಾರತದಾದ್ಯಂತ ಅಖಿಲ ಭಾರತ ಕಿಸಾನ್ ಘಟಕವು ಬಂದ್‍ಗೆ ಕರೆ ನೀಡಿದ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಯಲ್ಲಿಯೂ ಕೂಡ ರೈತರು ಸ್ವಯಂಘೋಷಿತ ಬಂದ್ ನಡೆಸುವ ಮೂಲಕ ರೈತರ ಹೋರಾಟಕ್ಕೆ ಬೆಂಬಲ ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸಂಘ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಕಾಡ್ಯಮಾಡ ಮನುಸೋಮಯ್ಯ ತಿಳಿಸಿದ್ದಾರೆ.

ರೈತ ಸಂಘದ ಕೇಂದ್ರ ಕಚೇರಿ ಗೋಣಿಕೊಪ್ಪಲುವಿನಲ್ಲಿ ರೈತ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ತಾ. 8 ರಂದು (ಇಂದು) ರಾಜಕೀಯ ರಹಿತ ವಾಗಿ ಕೊಡಗು ಜಿಲ್ಲೆಯಲ್ಲಿ ಬಂದ್ ಆಚರಿಸಲು ತೀರ್ಮಾನಿಸಲಾಯಿತು.

ಜಿಲ್ಲಾ ಕೇಂದ್ರ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಬೆಳಿಗ್ಗೆ 11 ಗಂಟೆಗೆ ರೈತರು ಪ್ರತಿಭಟನೆ ಹಮ್ಮಿಕೊಂಡಿದ್ದು ಹೊಸ ಕೃಷಿ ನೀತಿಯನ್ನು ವಿರೋಧಿಸಿ ಪ್ರತಿಭಟನೆ ನಡೆಯಲಿದೆ.

ದಸಂಸ ಬೆಂಬಲ

ಭಾರತದಾದ್ಯಂತ ಬಂದ್‍ಗೆ ಕೊಡಗು ದಲಿತ ಸಂಘರ್ಷ ಸಮಿತಿ ಬೆಂಬಲ ನೀಡಲಿದೆ ಎಂದು ಜಿಲ್ಲಾ ಸಂಚಾಲಕ ಹೆಚ್.ಆರ್. ಪರಶುರಾಮ್ ತಿಳಿಸಿದ್ದಾರೆ.

ರೈತಸಂಘ ಬೆಂಬಲ

ಸೋಮವಾರಪೇಟೆ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಗಳನ್ನು ವಾಪಾಸ್ ಪಡೆಯುವಂತೆ ಒತ್ತಾಯಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಒಕ್ಕೂಟ ತಾ. 8 ರಂದು (ಇಂದು) ಕರೆ ಕೊಟ್ಟಿರುವ ಭಾರತ್ ಬಂದ್‍ಗೆ ಕರ್ನಾಟಕ ರಾಜ್ಯ ರೈತ ಸಂಘದ ಸೋಮವಾರಪೇಟೆ ತಾಲೂಕು ಘಟಕ ಪೂರ್ಣ ಬೆಂಬಲ ವ್ಯಕ್ತಪಡಿಸಿದೆ ಎಂದು ಅಧ್ಯಕ್ಷ ಕೆ.ಎಂ. ದಿನೇಶ್, ಉಪಾಧ್ಯಕ್ಷ ಎ.ಆರ್. ಕುಶಾಲಪ್ಪ, ಸಂಚಾಲಕ ಡಿ.ಪಿ. ದಯಾನಂದ ತಿಳಿಸಿದ್ದಾರೆ.

ವೀರಾಜಪೇಟೆಯ ಐಕ್ಯ ಹೋರಾಟ ಸಮಿತಿಯಿಂದ ಕೇಂದ್ರದ ರೈತ ವಿರೋಧಿ ಕಾಯ್ದೆಯನ್ನು ವಿರೋಧಿಸಿ ಗಡಿಯಾರ ಕಂಬ ಬಳಿ ವೀರಾಜಪೇಟೆ ಬೆಳಿಗ್ಗೆ 10.30ಕ್ಕೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಐಕ್ಯ ಹೋರಾಟ ಸಮಿತಿಯ ಸಂಚಾಲಕ ವಿ.ಆರ್. ರಜನಿಕಾಂತ್ ತಿಳಿಸಿದ್ದಾರೆ.